Sandur | ದೌಲತ್ಪುರದಲ್ಲಿ 25.71 ಕೋಟಿ ರೂ. ವೆಚ್ಚದ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಚಾಲನೆ

ಸಂಡೂರು: ತಾಲೂಕಿನ ದೌಲತ್ಪುರ ಗ್ರಾಮದಲ್ಲಿ 25.71 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಹಾಗೂ ಅದಕ್ಕೆ ಸಂಬಂಧಿಸಿದ 110 ಕೆ.ವಿ. ಲೈಲೊ ಲೈನ್ ನಿರ್ಮಾಣ ಕಾಮಗಾರಿಗೆ ಶಾಸಕಿ ಅನ್ನಪೂರ್ಣ ಈ. ತುಕಾರಾಮ್ ಹಾಗೂ ಸಂಸದ ಈ. ತುಕಾರಾಮ್ ಅವರು ಶುಕ್ರವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕಿ ಅನ್ನಪೂರ್ಣ ಅವರು, ವಿದ್ಯುತ್ ಉಪಕೇಂದ್ರ ನಿರ್ಮಾಣದಿಂದ ದೌಲತ್ಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಮತ್ತು ರೈತರ ಕೃಷಿ ಪಂಪ್ಸೆಟ್ಗಳಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆಯಾಗಲಿದೆ. ಕ್ಷೇತ್ರದ ವಿದ್ಯುತ್ ಮೂಲಸೌಕರ್ಯವನ್ನು ಬಲಪಡಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಪ್ರಮುಖರಾದ ಸಾಧನ ಬೋಟೆ, ಶೈಲಜಾ ನಿಕ್ಕಮ್, ಗುತ್ತಿಗೆದಾರ ಜಯರಾಮ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




