ಸಿರುಗುಪ್ಪ | ʼಧರ್ತಿ ಜನಜಾತಿ ಗ್ರಾಮ ಉತ್ಕರ್ಷʼ ಅಭಿಯಾನಡಿ ಆರೋಗ್ಯ ತಪಾಸಣಾ ಶಿಬಿರ

ಸಿರುಗುಪ್ಪ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಬಳ್ಳಾರಿ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿರುಗುಪ್ಪ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಧರ್ತಿ ಜನಜಾತಿ ಗ್ರಾಮ ಉತ್ಕರ್ಷ ಅಭಿಯಾನದಡಿ ‘ಜನ್ ಭಾಗೀಧಾರಿ–ಸಬ್ಸೆ ದೂರ್ ಸಬ್ಸೆ ಪಹಿಲೆ’ ಕಾರ್ಯಕ್ರಮವನ್ನು ಬುಧವಾರ ರಾವಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮಿಟ್ಟೆ ಸೂಗೂರು ಗ್ರಾಮದ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಪರೀಕ್ಷೆ ಮಾಡಲಾಯಿತು. ಸುಮಾರು 25ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಮ, ಸಾರ್ವಜನಿಕರು ಪ್ರತಿ ಮೂರು ತಿಂಗಳಿಗೊಮ್ಮೆ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿಗಳ ಸೂಚನೆಯಂತೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜಶೇಖರ್, ಆರೋಗ್ಯ ನಿರೀಕ್ಷಣಾಧಿಕಾರಿ ಉಷಾ, ಪ್ರಾಥಮಿಕ ಸುರಕ್ಷತಾ ಅಧಿಕಾರಿ ಹುಲಿಗೆಮ್ಮ, ಶುಶ್ರೂಷಣಾಧಿಕಾರಿ ನಂದೆಪ್ಪ, ಇಲಾಖೆಯ ಪರಮೇಶ್ವರ್ ಹಾಗೂ ಗ್ರಾಮದ ಮುಖಂಡ ವೆಂಕಟರೆಡ್ಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.






