Siruguppa | ಅಕ್ರಮ ಪಡಿತರ ಅಕ್ಕಿ ಸಾಗಾಟ : 12 ಕ್ವಿಂಟಲ್ ಅಕ್ಕಿ ವಶ

ಸಿರುಗುಪ್ಪ: ತಾಲ್ಲೂಕಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ವಿರುದ್ಧ ಆಹಾರ ಇಲಾಖೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ಅಂದಾಜು 12 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಟಿಪ್ಪು ಸುಲ್ತಾನ್ ವೃತ್ತದ ಬಳಿ ಖಚಿತ ಮಾಹಿತಿ ಮೇರೆಗೆ ಆಹಾರ ಶಿರಸ್ತೇದಾರ ಹನುಮೇಶ ನೇತೃತ್ವದಲ್ಲಿ ಸಿರುಗುಪ್ಪ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಈ ವೇಳೆ ನಗರದಿಂದ ರಾಮತ್ನಾಳ ಕಡೆಗೆ ತೆರಳುತ್ತಿದ್ದ ಟಾಟಾ ಎಸಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿ ಪತ್ತೆಯಾಯಿತು.
ಅಧಿಕಾರಿಗಳು ಅಕ್ಕಿ ಸಾಗಿಸುತ್ತಿದ್ದ ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಸಿರುಗುಪ್ಪ ಪೊಲೀಸ್ ಠಾಣೆನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕ ನಾಗೇಶ್ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿದುಬಂದಿದೆ.
Next Story




