ಸಿರುಗುಪ್ಪ | ಪೋಕ್ಸೊ, ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ

ಸಿರುಗುಪ್ಪ(ಬಳ್ಳಾರಿ): ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಶೋಷಣೆ ಹಾಗೂ ಸೈಬರ್ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳಲ್ಲಿ ‘ಸುರಕ್ಷತಾ ಬಾಲ ಅಭಿಯಾನ’ವನ್ನು ಹಮ್ಮಿಕೊಳ್ಳಲಾಯಿತು.
ತೆಕ್ಕಲಕೋಟೆಯ ಶ್ರೀ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕನಕಶ್ರೀ ವಿದ್ಯಾಸಂಸ್ಥೆ, ಸರ್ಕಾರಿ ಪದವಿಪೂರ್ವ ಕಾಲೇಜು, ಸರಕಾರಿ ಪ್ರೌಢಶಾಲೆ ಹಾಗೂ ಸಮೀಪದ ಹಳೇಕೋಟೆ ಸರಕಾರಿ ಪ್ರೌಢಶಾಲೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು, ಆನ್‌ಲೈನ್ ವಂಚನೆ ಹಾಗೂ ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆಯ ಕುರಿತು ಜಾಗೃತಿ ಮೂಡಿಸಲಾಯಿತು.
ತೆಕ್ಕಲಕೋಟೆ ಎಎಸ್ಐ ಪ್ರಭಾವತಿ ಮಾತನಾಡಿ, ಮಕ್ಕಳು ಯಾವುದೇ ರೀತಿಯ ದೌರ್ಜನ್ಯ ಅಥವಾ ಕಿರುಕುಳಕ್ಕೆ ಒಳಗಾದರೆ ಭಯದಿಂದ ಮೌನವಾಗಿರದೆ ಪೋಷಕರು, ಶಿಕ್ಷಕರು ಅಥವಾ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮಕ್ಕಳ ವಿಶೇಷ ಘಟಕದ ಮುಖ್ಯಪೇದೆ ಪಿ.ಲಲಿತಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮಹಾದೇವಿ, ಅಕ್ಕಪಡೆಯ ಅಧಿಕಾರಿಗಳಾದ ಗಾಯತ್ರಿ, ಅಂಬ್ರಿನ್, ಮಂಜುಳಾ, ಮಲ್ಲೇಶ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.






