ವಕೀಲರ ರಕ್ಷಣಾ ಕಾಯ್ದೆ ಬಲಪಡಿಸಲು ಕ್ರಮ: ಗೃಹ ಸಚಿವರಿಗೆ ವಕೀಲರ ಸಂಘದ ಮನವಿ

ಪ್ರಿಯಾಂಕ್ ಖರ್ಗೆ
ಬೆಂಗಳೂರು : ವಕೀಲರ ಮೇಲಿನ ಹಲ್ಲೆ ಮತ್ತು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ವಕೀಲರ ರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ.
ಮಂಗಳವಾರ ನಗರದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಚ್.ವಿ. ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್. ಹಾಗೂ ಖಜಾಂಚಿ ಶ್ವೇತಾ ರವಿಶಂಕರ್ ಅವರ ನಿಯೋಗವು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಪತ್ರವನ್ನು ಸಲ್ಲಿಸಿತು.
ವಕೀಲರಾದ ಮಂಜುನಾಥ್, ಅನ್ನಪೂರ್ಣೇಶ್ವರಿ ನಗರದ ಶ್ರೀರಾಮ್ ಅವರ ಹತ್ಯೆ ಹಾಗೂ ಗೌರಿಬಿದನೂರಿನ ವೆಂಕಟ್ರಮಣ ಸನ್ನಕ್ಕಿ ಅವರ ಮೇಲಿನ ಕೊಲೆ ಯತ್ನದ ಪ್ರಕರಣಗಳ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಅನಧಿಕೃತವಾಗಿ ಮಧ್ಯಪ್ರವೇಶಿಸಿ ಇತ್ಯರ್ಥಪಡಿಸುವುದಕ್ಕೆ ಕಡಿವಾಣ ಹಾಕಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ‘ವಕೀಲರ ಸಂಘದ ಬೇಡಿಕೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
‘ವಕೀಲರ ರಕ್ಷಣಾ ಕಾಯ್ದೆಗೆ ಕಠಿಣ ಹಾಗೂ ಜಾಮೀನು ರಹಿತ ಅಪರಾಧದ ಅಂಶಗಳನ್ನು ಸೇರ್ಪಡೆಗೊಳಿಸಿ, ಕನಿಷ್ಠ 10 ವರ್ಷಗಳ ಶಿಕ್ಷೆಗೆ ಅವಕಾಶ ಕಲ್ಪಿಸಬೇಕು. ಪೊಲೀಸ್ ಠಾಣೆಗಳಿಗೆ ತೆರಳುವ ವಕೀಲರು ಹಾಗೂ ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಲು ಪ್ರಮಾಣಿತ ಕಾರ್ಯಾಚರಣಾ ವಿಧಾನ(ಎಸ್ಒಪಿ) ರೂಪಿಸಿ ಎಲ್ಲ ಠಾಣೆಗಳಲ್ಲಿ ಜಾರಿಗೊಳಿಸಬೇಕು’
-ವಿವೇಕ್ ಸುಬ್ಬಾ ರೆಡ್ಡಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ






