Bengaluru | ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ವಕೀಲರ ಧರಣಿ

ಬೆಂಗಳೂರು : ಬೆಂಗಳೂರು ಮಹಾನಗರದ ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಕೀಲರು ಧರಣಿ ನಡೆಸಿದರು.
ಬುಧವಾರ ಹೈಕೋರ್ಟ್ ಮುಂಭಾಗ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಜಮಾಯಿಸಿದ ವಕೀಲರು, ನ್ಯಾಯಾಲಯಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ಹಾಗೂ ಗಂಭೀರ ಸ್ವರೂಪದ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೈಕೋರ್ಟ್ ರಿಜಿಸ್ಟ್ರಿ ಯಾವುದೇ ಕ್ರಮ ಕೈಗೊಂಡಿಲ್ಲ. ಹೈಕೋರ್ಟ್‌ನಲ್ಲಿ ಹೊಸ ಪ್ರಕರಣಗಳ ವಿಚಾರಣೆಗೆ ದಿನಾಂಕಗಳು ಸಿಗುತ್ತಿಲ್ಲವಾದ ಕಾರಣ ವಿಚಾರಣೆ ವಿಳಂಬವಾಗುತ್ತಿದೆ. ಇದರಿಂದ ದಾವೆದಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ಬೆಂಗಳೂರು ನಗರ ಸಿವಿಲ್ ಕೋರ್ಟ್‌ನಲ್ಲಿ ಬರೋಬ್ಬರಿ 25 ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಹುದ್ದೆಗಳು ಖಾಲಿ ಇವೆ. ಈ ನ್ಯಾಯಾಲಯಗಳಿಗೆ ಮತ್ತೊಬ್ಬ ನ್ಯಾಯಾಧೀಶರನ್ನು ಉಸ್ತುವಾರಿಯಾಗಿ ನೇಮಿಸುತ್ತಿದ್ದು, ಎರಡೂ ನ್ಯಾಯಾಲಯಗಳ ಕಲಾಪಕ್ಕೆ ತೀವ್ರ ಅಡ್ಡಿಯಾಗುತ್ತಿದೆ. ಹೈಕೋರ್ಟ್ ಸೇರಿದಂತೆ ಸಿಟಿ ಸಿವಿಲ್ ಕೋರ್ಟ್, ಮ್ಯಾಜಿಸ್ಟ್ರೇಟ್ ಮತ್ತು ಮೇಯೊ ಹಾಲ್ ಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಈಗಾಗಲೇ ಪತ್ರ ಬರೆದಿದೆ. ಆದರೂ, ಈ ವಿಷಯಗಳ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹೊಸದಾಗಿ ನಿರ್ಮಿಸಿರುವ ಕಟ್ಟಡದಲ್ಲಿ ಕೇವಲ ಒಂದೇ ಒಂದು ಲಿಫ್ಟ್ ಇರುವುದರಿಂದ, ವಕೀಲರು ಮತ್ತು ವಯಸ್ಸಾದ ಕಕ್ಷಿದಾರರು 7ನೇ 'ಮಹಡಿಯವರೆಗೆ ಮೆಟ್ಟಿಲು ಹತ್ತಿಯೇ ಹೋಗಬೇಕಾದ ಅನಿವಾರ್ಯತೆ ಇದೆ. ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದರು.






