Bengaluru | ಸಚಿವ ಸತೀಶ್ ಜಾರಕಿಹೊಳಿ ಮೇಲೆ ಈಡಿ ದಾಳಿ ಖಂಡಿಸಿ ಪ್ರತಿಭಟನೆ

ಬೆಂಗಳೂರು : ರಾಜಕೀಯ ಪ್ರೇರಿತವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಆರೋಪಿಸಿ ಸಚಿವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಶುಕ್ರವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ‘ಸತೀಶ್ ಜಾರಕಿಹೊಳಿ ಅಭಿಮಾನಿ ಸಂಘ’ದ ಹೂದಿಗೆರೆ ರಮೇಶ್ ಹಾಗೂ ಕೆಪಿಸಿಸಿ ಕಾನೂನು ಘಟಕದ ಕಾರ್ಯಾಧ್ಯಕ್ಷ ಅನಂತ್ ನಾಯ್ಕ್ ನೇತೃತ್ವದಲ್ಲಿ ಜಮಾಯಿಸಿದ ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುತ್ತಾರೆ ಎಂಬ ಭೀತಿಯಿಂದ ರಾಜಕೀಯ ಪ್ರೇರಿತವಾಗಿ ‘ಈಡಿ' ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರಕಾರ ಈ ರೀತಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಸತೀಶ್ ಜಾರಕಿಹೊಳಿ ಮಾನವ ಬಂಧುತ್ವ ವೇದಿಕೆಯ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೊಡಗುವ ಸಾವಿರಾರು ವಿದ್ಯಾರ್ಥಿಗಳಿಗೆ ನೆರವು ನೀಡಿದ್ದಾರೆ. ಹೀಗೆ ಹತ್ತು ಹಲವು ಸಮಾಜ ಸುಧಾರಣೆಯಲ್ಲಿ ತೊಡಗಿರುವ ಅವರ ಏಳಗೆಯನ್ನು ಸಹಿಸದೆ ಅವರನ್ನು ರಾಜಕೀಯವಾಗಿ ಹತ್ತಿಕ್ಕಲು ಯತ್ನಿಸುತ್ತಿರುವುದು ಖಂಡನೀಯ ಎಂದು ಹೇಳಿದರು.
ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ‘ಕಾಂಗ್ರೆಸ್ ನಾಯಕರ ವಿರುದ್ಧ ಮೋದಿ ಸರಕಾರವು ಅಡ್ಡದಾರಿಯಲ್ಲಿ ನಡೆಸುತ್ತಿರುವ ರಾಜಕೀಯ ಪ್ರೇರಿತ ದುರುದ್ದೇಶಪೂರಿತ ದಾಳಿಗಳು ಪದೇ ಪದೇ ಬಳಸುತ್ತಿರುವ ಸವೆದುಹೋದ ತಂತ್ರವಷ್ಟೇ. ಇಂತಹ ಕೃತ್ಯಗಳು ಕನ್ನಡಿಗರ ಸೇವೆ ಮಾಡುವ ನಮ್ಮ ಸಂಕಲ್ಪವನ್ನು ಎಂದಿಗೂ ಕುಗ್ಗಿಸಲು ಅಥವಾ ಹೆದರಿಸಲು ಸಾಧ್ಯವಿಲ್ಲ’ ಎಂದು ಟೀಕಿಸಿದರು.
ಪರಿಶಿಷ್ಟ ಪಂಗಡ(ಎಸ್‍ಟಿ)ದ ಪ್ರಭಾವಿ ನಾಯಕರಾದ ಸತೀಶ್ ಜಾರಕಿಹೊಳಿ ಅವರ ಮೇಲಿನ ರಾಜಕೀಯ ದಾಳಿ ಹಾಗೂ ಈಡಿ ದಾಳಿಗಳು, ಸೋಲಿನ ಭೀತಿಯಲ್ಲಿರುವ ಬಿಜೆಪಿ ನಡೆಸುತ್ತಿರುವ ರಾಜಕೀಯ ಸೇಡಿನ ರಾಜಕಾರಣಕ್ಕೆ ಮತ್ತೊಂದು ಪ್ರತ್ಯಕ್ಷ ಉದಾಹರಣೆಯಾಗಿದೆ ಎಂದ ಅವರು, ಬಿಜೆಪಿಯವರು ಒಂದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಲಿ ಕಾಂಗ್ರೆಸ್ ಎಂದಿಗೂ ತಲೆಬಾಗುವುದಿಲ್ಲ, ನಾವು ಯಾವುದಕ್ಕೂ ಅಂಜುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಂದುವರಿಸಿಕೊಂಡು ಜನಸೇವೆಯನ್ನು ನಿರಂತರವಾಗಿ ಮುನ್ನಡೆಸಿಕೊಂಡು ಹೋಗುತ್ತೇವೆ ಎಂದು ಎಚ್ಚರಿಕೆ ನೀಡಿದರು.
‘ಸಚಿವ ಸತೀಶ್ ಜಾರಕಿಹೊಳಿ ಅವರ ಜನಪ್ರಿಯತೆ ಹಾಗೂ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಕೇಂದ್ರ ಸರಕಾರ ಈಡಿ ದಾಳಿ ನಡೆಸಿದೆ. ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ರಾಜಕೀಯ ದ್ವೇಷ ಸಾಧನೆಗೆ ಬಳಸಿಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು’
- ಅನಂತ್ ನಾಯ್ಕ್, ಕೆಪಿಸಿಸಿ ಕಾನೂನು ಘಟಕದ ಕಾರ್ಯಾಧ್ಯಕ್ಷ






