Bengaluru | ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ಆರೋಪಿ ಸೆರೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಹೆಣ್ಣೂರು ಠಾಣಾ ಪೊಲೀಸರು ಬಂಧಿಸಿದ್ದು, 1.80 ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಎಚ್.ಬಿ.ಆರ್.ಲೇಔಟ್ನ ನಿವಾಸಿಯೊಬ್ಬರು ಅ.5ರಂದು ರಾತ್ರಿ ತಮ್ಮ ಮನೆಯ ಮುಂಭಾಗದಲ್ಲಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿದ್ದು, ಮರುದಿನ ಬೆಳಿಗ್ಗೆ ಬಂದು ನೋಡಿದಾಗ, ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿದೆ.
ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು, ಖಚಿತ ಮಾಹಿತಿಯನ್ನು ಕಲೆಹಾಕಿ, ಸರಾಯಿಪಾಳ್ಯದ ತುಬಾ ಲೇಔಟ್ನ, ಮದ್ರಸದ ಹತ್ತಿರ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಈ ಪ್ರಕರಣದಲ್ಲಿ ಬಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿಯು ಕಳವು ಮಾಡಿದ ದ್ವಿ-ಚಕ್ರ ವಾಹನಗಳನ್ನು ಮಾರಾಟ ಮಾಡುವ ಸಲುವಾಗಿ ಡಿ.ಜೆ. ಹಳ್ಳಿಯ ಮಸೀದಿ ಹತ್ತಿರವಿರುವ ತನ್ನ ವಾಸದ ಮನೆ ಬಳಿ ನಿಲ್ಲಿಸಿರುವುದಾಗಿ ತಿಳಿಸಿದ್ದನು. ಆರೋಪಿಯು ತಿಳಿಸಿದ ಸ್ಥಳದಿಂದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಬಂಧನದಿಂದ ಹೆಣ್ಣೂರು ಪೊಲೀಸ್ ಠಾಣೆಯ 2, ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 1 ದ್ವಿಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು ಮೂರು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಸದ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.






