ಎಚ್.ಎಂ.ರೇವಣ್ಣ ಪುತ್ರನ ಕಾರು ಅಪಘಾತ: ಬೈಕ್ ಸವಾರ ಸಾವು
ಬೆಂಗಳೂರು: ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದ ಬಳಿ ಗುರುವಾರ ತಡರಾತ್ರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಪುತ್ರ ಆರ್. ಶಶಾಂಕ್‍ಗೆ ಸೇರಿದ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾರೆ.
ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್(27) ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ಯುವಕ. ಈ ಕಾರು ಆರ್. ಶಶಾಂಕ್ ಅವರ ಹೆಸರಿನಲ್ಲಿರುವುದು ದೃಢಪಟ್ಟಿದ್ದು, ಘಟನೆಯ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುದೂರು ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದು, ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.
ಅಪಘಾತದ ಸಂಬಂಧ ಮಾಜಿ ಸಚಿವ ಎಚ್.ಎಂ. ರೇವಣ್ಣ ಮಾತನಾಡಿ, ‘ಅಪಘಾತ ಸಂಭವಿಸಿದ ವೇಳೆ ನನ್ನ ಪುತ್ರ ಕಾರು ಚಲಾಯಿಸುತ್ತಿರಲಿಲ್ಲ. ಚಾಲಕ ಕಾರು ಓಡಿಸುತ್ತಿದ್ದಾಗ ಅಪಘಾತ ಸಂಭವಿಸಿದೆ' ಎಂದು ಹೇಳಿದ್ದಾರೆ.





