Bengaluru | ಮಹದೇವಪುರ ಕ್ಷೇತ್ರದಲ್ಲಿ ನಕಲಿ ಮತದಾರರ ಸೇರ್ಪಡೆ ಆರೋಪ: ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: 2024ರ ಲೋಕಸಭೆ ಚುನಾವಣೆಗೂ ಮುನ್ನ ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂಬ ಆರೋಪದಡಿ ಇಲ್ಲಿನ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬೆಂಗಳೂರಿನ ನಲ್ಲೂರುಹಳ್ಳಿ ನಿವಾಸಿ ವೈ.ವಿನೋದ (39) ಎಂಬವರು ದೂರು ನೀಡಿದ್ದು, ಸರಕಾರಿ ಅಧಿಕಾರಿಗಳು, ಇತರೆ ಖಾಸಗಿ ವ್ಯಕ್ತಿಗಳು ಲೋಕಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ಸೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಚುನಾವಣಾ ವಂಚನೆಯು ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮೇಲೆ ಪರಿಣಾಮ ಬೀರುವ ಗಂಭೀರ ಸಮಸ್ಯೆಯಾಗಿದೆ. 2024ರ ಚುನಾವಣೆಗೆ ಮುಂಚಿತವಾಗಿ ಮಹದೇವಪುರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ನಕಲಿ ಮತ್ತು ಸುಳ್ಳು ಮತದಾರರ ಬಗ್ಗೆ ನಿಷ್ಪಕ್ಷಪಾತ ಮತ್ತು ನ್ಯಾಯಯುತ ತನಿಖೆಯಾಗಬೇಕು. ಹಾಗೆಯೇ ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.





