ಸರಕಾರ ಅಪಾರ್ಟ್ ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಸರಕಾರ ಅಪಾರ್ಟ್‍ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್‍ಮೆಂಟ್ ಮಾಲಕತ್ವ ಮತ್ತು ನಿರ್ವಹಣೆ ವಿಧೇಯಕ-2025ಕ್ಕೆ ಸಂಬಂಧಿಸಿದಂತೆ ಅಪಾರ್ಟ್‍ಮೆಂಟ್ ಅಸೋಸಿಯೇಷನ್‍ಗಳ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಇಲ್ಲಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ಅಪಾರ್ಟ್‍ಮೆಂಟ್(ಮಾಲಕತ್ವ ಮತ್ತು ನಿರ್ವಹಣೆ) ವಿಧೇಯಕ-2025 ಕುರಿತು ಅಪಾರ್ಟ್‍ಮೆಂಟ್ ಅಸೋಸಿಯೇಷನ್‍ಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.
ನಾನು ನಿಮಗೆ ಸಹಾಯ ಮಾಡುವುದರ ಜೊತೆಗೆ ನಿಮ್ಮ ಸಹಾಯವನ್ನು ಮತಗಳ ಮೂಲಕ ಬಯಸುತ್ತೇನೆ. ಜಿಬಿಎ ಚುನಾವಣೆಯಲ್ಲಿ ನೀವು ನಮ್ಮ ಜತೆ ನಿಲ್ಲಿ ಎಂದು ಕೋರುತ್ತೇನೆ. ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದೇನೆ. ಅದಕ್ಕಾಗಿ ಯಾರೂ ಜಾರಿಗೆ ತರದ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದೇನೆ. ನನಗೆ ನಿರಾಸೆ ಮಾಡಬೇಡಿ ಎಂದು ಅವರು ತಿಳಿಸಿದರು.
ಬೆಂಗಳೂರಿನ ಸಮಸ್ಯೆ ನಿವಾರಿಸಿ, ನಗರದ ಸ್ವರೂಪ ಬದಲಿಸಲು, ಅನೇಕ ಯೋಜನೆ ಕೈಗೊಂಡಿದ್ದೇವೆ. ಬಹಳ ಅಧ್ಯಯನ ಮಾಡಿ 2 ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. 130 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಅನ್ನು 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದೇವೆ. ಯಾರು ಏನೇ ಟೀಕೆ ಮಾಡಿದರೂ, ನಾವು ಈ ಯೋಜನೆ ಮಾಡೇ ಮಾಡುತ್ತೇವೆ. ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಈ ಯೋಜನೆ ಮುಂದುವರಿಸುವಂತೆ ನನಗೆ ತಿಳಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ನಾನು ಸಾಕಷ್ಟು ಅಧ್ಯಯನ ನಡೆಸಿದ ನಂತರ ಟನಲ್ ರಸ್ತೆ ಉತ್ತಮ ಆಯ್ಕೆಯಾಗಿದೆ. ರಸ್ತೆ ಅಗಲೀಕರಣಕ್ಕೆ ನಾವು ಯಾವುದೇ ಕಟ್ಟಡ ಕೆಡವಲು ಆಗುವುದಿಲ್ಲ. 2013ರ ಕಾಯ್ದೆ ಅನುಸಾರ ಆಸ್ತಿ ಮೌಲ್ಯದ ದುಪ್ಪಟ್ಟು ಪರಿಹಾರ ನೀಡಬೇಕು. ಈಗ ನಗರದ ಆಸ್ತಿ ಮೌಲ್ಯ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.
ಕಿರಣ್ ಹೆಬ್ಬಾರ್ ಎಂಬಾತ ತಾನು ಅಂಪಾರ್ಟ್‍ಮೆಂಟ್ ಮಾಲಕ ಎಂದು ಪತ್ರ ಬರೆದಿದ್ದು, ನಮಗೆ ಬೆದರಿಕೆ ಹಾಕಲು ಮುಂದಾಗಿದ್ದಾನೆ. ನಮ್ಮಲ್ಲಿ ಬಹುದೊಡ್ಡ ಮತದಾರರ ಸಮೂಹವಿದ್ದು, ಬೆಂಗಳೂರಿನ 1.30 ಕೋಟಿ ಮತದಾರರ ಮೇಲೆ ಪರಿಣಾಮ ಬೀರಬಲ್ಲೆವು. ಸರಕಾರಗಳು ನಮ್ಮನ್ನು ನಿರ್ಲಕ್ಷಿಸಿದ್ದು, ಆಡಳಿತ ಪಕ್ಷ ನಮ್ಮ ಮನವಿ ನಿರ್ಲಕ್ಷಿಸಿದರೆ ಸದ್ಯದಲ್ಲೇ ಜಿಬಿಎ ಚುನಾವಣೆ ಬರುತ್ತಿದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾನೆ. ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಅವನ್ಯಾರೋ ಹೆಬ್ಬಾರ್ ಎಂಬುವವನಿಗೆ ಹೆದರುತ್ತೇನೆಯೇ ಎಂದು ಅವರು ಹೇಳಿದರು.
ಅಪಾರ್ಟ್ ಮೆಂಟ್ ನಿವಾಸಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಿದ್ದೇವೆ. ಈ ಯೋಜನೆ ಜಾರಿ ಅಸಾಧ್ಯ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳೇ ಅವರನ್ನು ಕಾಪಾಡುತ್ತಿದೆ. ಕಾವೇರಿ 5ನೆ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿ, ಮೊದಲು ನೀರಿನ ಸಂಪರ್ಕ ಪಡೆಯಿರಿ, ಒಂದು ವರ್ಷ ತಡವಾಗಿ ಬೇಕಾದರೆ ಹಣ ಪಾವತಿಸಿ ಎಂದು ಕಾಲಾವಕಾಶವನ್ನು ನೀಡಿದ್ದೇವೆ. ಆರನೇ ಹಂತದ ಯೋಜನೆಗೆ ಯೋಜನೆ ರೂಪಿಸಿದ್ದೇವೆ ಎಂದು ಅವರು ಹೇಳಿದರು.
ಬೆಂಗಳೂರಿನ ಜನಸಂಖ್ಯೆಯಲ್ಲಿ ಶೇ.19 ಜನ ಅಪಾಟ್ಮೆರ್ಂಟ್ ನಿವಾಸಿಗಳಾಗಿದ್ದಾರೆ. ಇಂದು ಇಡೀ ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ಹೊಂದಿರುವವರು ಇದ್ದಾರೆ. ಕ್ಯಾಲಿಫೋರ್ನಿಯದಲ್ಲಿ 13 ಲಕ್ಷ ಐಟಿ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು ಇದ್ದಾರೆ. ಇದರಲ್ಲಿ ಬಹುತೇಕರು ನಿಮ್ಮ ಅಪಾರ್ಟ್ ಮೆಂಟ್ ನಲ್ಲಿ ಇದ್ದಾರೆ ಎಂದು ಅವರು ಹೇಳಿದರು.
ಶಾಸಕ ರಿಝ್ವಾನ್ ಅರ್ಷದ್, ರಾಜ್ಯಸಭೆ ಸದಸ್ಯ ಲೆಹಾರ್ ಸಿಂಗ್, ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.







