MGNREGA ಯೋಜನೆ ಬದಲಾವಣೆ ವಿರೋಧಿಸಿ ರಾಜ್ಯದ ಪ್ರತಿ ಪಂಚಾಯಿತಿಯಿಂದಲೂ ಹೋರಾಟ ಆರಂಭ : ಡಿ.ಕೆ.ಶಿವಕುಮಾರ್

ಬೆಂಗಳೂರು : ಮ-ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಕೈಬಿಟ್ಟಿರುವುದು ಹಾಗೂ ಇತರೆ ಬದಲಾವಣೆ ಮಾಡಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ ಜ.5ರಿಂದ ರಾಜ್ಯದ ಪ್ರತಿ ಪಂಚಾಯಿತಿಂದಲೂ ಬೃಹತ್ ಹೋರಾಟ ಆರಂಭಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರವಿವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಮ-ನರೇಗಾ ಹೆಸರು ಬದಲಾವಣೆ ವಿರೋಧಿಸಿ ಜ.5ರಿಂದ ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು.
ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150ರಿಂದ200 ಇದ್ದು, ಇವರೆಲ್ಲರೂ ಹೋರಾಟದ ಜವಾಬ್ದಾರಿ ತೆಗೆದುಕೊಳ್ಳಬೇಕು. ಇದರ ಉಸ್ತುವಾರಿಗೆ ಜಿ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವೀಕ್ಷಕರನ್ನು ನೇಮಿಸಲಾಗುತ್ತದೆ ಎಂದು ಅವರು ಹೇಳಿದರು.
ಎರಡು ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದರು.
ಅಂದು ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಎಐಸಿಸಿ ಅಧಿವೇಶನ ಹೇಗೆ ನಡೆಯಿತು ಎನ್ನುವ ಕುರಿತಾದ ಗಾಂಧಿ ಭಾರತ ಪುಸ್ತಕವನ್ನು ರೂಪಿಸಿದ್ದೇನೆ. ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಲಭ್ಯವಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಇದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ. ಜತೆಗೆ, ಇದರ ನೆನಪಿಗೆ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಹೊರಟಿದ್ದೇವೆ. ಈಗಾಗಲೇ 70 ಕಾಂಗ್ರೆಸ್ ಕಚೇರಿಗಳು ನಿರ್ಮಾಣವಾಗಿವೆ.
ಬೆಂಗಳೂರಿನಲ್ಲೂ ಎರಡು ಕಚೇರಿಗಳ ನಿರ್ಮಾಣ ಮಾಡಲಾಗುವುದು. ಒಂದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇನ್ನೊಂದು ಕಚೇರಿ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಒಂದು ಜಿಲ್ಲಾ ಕಚೇರಿ ಇನ್ನೊಂದು ರಾಜ್ಯ ಕಚೇರಿ. ಮೈಸೂರಿನಲ್ಲಿಯೂ ಸಹ ದೊಡ್ಡ ಕಚೇರಿ ನಿರ್ಮಾಣ ಮಾಡಲಾಗುವುದು. ಇದರ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಹೀಗೆ, ಎಲ್ಲ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರು ಅಡಿಪಾಯ ಹಾಕಲು ಕಾಯಲು ಹೋಗಬೇಡಿ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ವರ್ಚುಯಲ್ ಆಗಿ ಎಲ್ಲ ಕಾಂಗ್ರೆಸ್ ಭವನಗಳ ಅಡಿಪಾಯಗಳಿಗೆ ಚಾಲನೆ ನೀಡಲಿದ್ದಾರೆ. ಆದರೆ ಎಲ್ಲ ತಯಾರಿಗಳನ್ನು ಈಗಲೇ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಗ್ಯಾರಂಟಿ ಯೋಜನೆ ಅನುಷ್ಟಾ ನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಎಐಸಿಸಿ ಕಾರ್ಯದರ್ಶಿ ನಿವೇದಿತಾ ಆಳ್ವಾ, ಎಐಸಿಸಿ ಜಂಟಿ ಕಾರ್ಯದರ್ಶಿ ಡಾ.ಪಾಲಕ್ ವರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ, ಮಾಜಿ ಸಂಸದ ಪ್ರೊ.ರಾಜೀವ್ ಗೌಡ ಸೇರಿದಂತೆ ಪ್ರಮುಖರಿದ್ದರು.
ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಜಿ ರಾಮ್ ಜಿ ಅಸಾಧ್ಯ..!
ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದಲ್ಲಿ ಬಡವರಿಗೆ ಉದ್ಯೋಗ ನೀಡುವ ಮ-ನರೇಗಾ ಯೋಜನೆ ತಂದಿತ್ತು. ಕೇಂದ್ರ ಬಿಜೆಪಿ ಸರಕಾರ ಈ ಯೋಜನೆಯನ್ನು ಹತ್ಯೆ ಮಾಡಲು ಮುಂದಾಗಿದೆ. ಈ ಯೋಜನೆಯಲ್ಲಿ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿಕೊಳ್ಳುವ ಬದಲಾವಣೆ ತಂದಿದ್ದಾರೆ. ನೂತನ ತಿದ್ದುಪಡಿ ಯೋಜನೆಯನ್ನು ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ.
-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ.
ಅಲೆಗ್ಸಾಂಡರ್ ಶಾಶ್ವತವಲ್ಲ, ಬಿಜೆಪಿ ಯಾವ ಲೆಕ್ಕ? :
ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?.ಅದು ಅಲ್ಲದೆ, ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದು ಯಾವ ಲೆಕ್ಕ?.
-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ.







