ಶಾಸಕರು IPL ಉಚಿತ ಟಿಕೆಟ್ ಕೇಳುವುದು ತಪ್ಪು: ಡಿ.ಕೆ. ಸುರೇಶ್

ಬೆಂಗಳೂರು: ಶಾಸಕರು ಉಚಿತವಾಗಿ ಐಪಿಎಲ್ ಟಿಕೆಟ್ ಕೇಳಿರುವುದು ತಪ್ಪು. ಪಂದ್ಯ ವೀಕ್ಷಣೆ ಮಾಡುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, RCB ಸಂಭ್ರಮಾಚರಣೆ ವೇಳೆ ನಡೆದ ದುರ್ಘಟನೆ ಸಂದರ್ಭದಲ್ಲಿ ಯಾರು ಯಾವ ರೀತಿ ವಾಗ್ದಾಳಿ ಮಾಡಿದ್ದರು, ಪದ ಬಳಸಿದ್ದರು ಎಂದು ತೆಗೆದು ನೋಡಲಿ. ಬಿಜೆಪಿ ಶಾಸಕರು ಕೂಡ ಐಪಿಎಲ್ ಟಿಕೆಟ್ ಪಡೆದಿದ್ದಾರೆ. ಐಪಿಎಲ್ ರಾಷ್ಟ್ರವನ್ನು ಪ್ರತಿನಿಧಿಸುವ ಪಂದ್ಯಾವಳಿ ಅಲ್ಲ. ವಾಣಿಜ್ಯ ಉದ್ದೇಶಿತ ಪಂದ್ಯಾವಳಿ. ಇವುಗಳ ಬಗ್ಗೆ ಜನಪ್ರತಿನಿಧಿಗಳು ಹೆಚ್ಚು ಗಮನಹರಿಸುವುದು ಒಳ್ಳೆಯದಲ್ಲ ಎಂದು ಹೇಳಿದರು.
ಬೆಂಗಳೂರಿನ ನಾಲ್ಕು ಕಡೆ ಕ್ರೀಡಾಂಗಣಗಳನ್ನು ನಿರ್ಮಿಸಬೇಕು:
ಚಿನ್ನಸ್ವಾಮಿ ಕ್ರೀಡಾಂಗಣ ಬೇರೆಡೆ ಸ್ಥಳಾಂತರ ಮಾಡಬೇಕು ಎಂಬ ಚರ್ಚೆ ನಡೆಯುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ನಾನು ಆಯ್ಕೆ ಮಾಡಿ, ಸೂಚಿಸಿದ ಜಾಗದಲ್ಲಿ ಹೊಸ ಕ್ರೀಡಾಂಗಣ ಮಾಡಲು ಸರಕಾರ ಮನ್ನಣೆ ನೀಡಿದೆ. ಸೂರ್ಯ ಸಿಟಿಯಲ್ಲಿ ಕ್ರೀಡಾಂಗಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು ನಾನೇ. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ನಾಲ್ಕು ಕ್ರೀಡಾಂಗಣ ಮಾಡಬೇಕು ಎಂದು ತಿಳಿಸಿದರು.
ಕಂಠೀರವ ಕ್ರೀಡಾಂಗಣ, ಕೆಎಸ್‍ಸಿಎ, ಫುಟ್ಬಾಲ್ ಕ್ರೀಡಾಂಗಣ ಹೊರತಾಗಿ ಬೇರೆ ಯಾವುದೆ ಕ್ರೀಡಾಂಗಣವಿಲ್ಲ. ಇಷ್ಟು ದೊಡ್ಡ ಜನಸಂಖ್ಯೆ ಇರುವ ನಗರದಲ್ಲಿ ಯುವಕರಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡಬೇಕಾದರೆ ನಾಲ್ಕು ದಿಕ್ಕಿನಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಎಂದು ಸಲಹೆ ನೀಡಿದ್ದೆ. ನಾನು ಲೋಕಸಭೆ ಸದಸ್ಯನಾಗಿದ್ದಾಗ, ನನ್ನದೇ ಕ್ಷೇತ್ರದ ಸೂರ್ಯ ಸಿಟಿಯಲ್ಲಿ 100 ಎಕರೆ ಮೀಸಲಿಡಬೇಕು ಎಂದು ಹೇಳಿದ್ದೆ. ನಂತರ ಅದನ್ನು ಮೀಸಲಿಟ್ಟು, ಯೋಜನೆ ಅನುಮೋದನೆ ಪಡೆಯಲಾಗಿತ್ತು ಎಂದು ಸುರೇಶ್ ಹೇಳಿದರು.
ಈ ಬಗ್ಗೆ ನಾನು ಸಚಿವ ಝಮೀರ್ ಅಹ್ಮದ್, ರಾಜೀವ್ ಗಾಂಧಿ ವಸತಿ ನಿಗಮದ ಅಧ್ಯಕ್ಷ ಶಿವಲಿಂಗೇಗೌಡರನ್ನು ಭೇಟಿ ಮಾಡಿದ್ದೇನೆ ಹಾಗೂ ಆನೇಕಲ್ ಶಾಸಕ ಶಿವಣ್ಣ ಜೊತೆ ಚರ್ಚೆ ಮಾಡಿದ್ದೇನೆ. ಈಗ ಈ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದನೆ ನೀಡಲಾಗಿದೆ. 50-60 ಎಕರೆ ಪ್ರದೇಶದಲ್ಲಿ ಅತ್ಯುತ್ತಮ ಕ್ರೀಡಾಂಗಣ ಆಗಲಿದೆ ಎಂದು ಅವರು ತಿಳಿಸಿದರು.
ಬಿಡಿಎ ಮೂಲಕ ಶಿವರಾಮ ಕಾರಂತ ಬಡಾವಣೆಯಲ್ಲೂ ಕ್ರೀಡಾಂಗಣ ಮಾಡಬೇಕು ಎಂದು ಉಪಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಅಲ್ಲೂ 40 ಎಕರೆ ಮೀಸಲಿಡಲಾಗಿದೆ. ಬಿಡದಿಯಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಮೀಸಲಿಡಲು ಸಂಬಂಧಪಟ್ಟವರ ಜತೆ ಚರ್ಚೆ ಮಾಡುವೆ ಎಂದು ಸುರೇಶ್ ತಿಳಿಸಿದರು.
ದ್ವಿಭಾಷಾ ನೀತಿ ತೀರ್ಮಾನ ಉತ್ತಮ:
ದ್ವಿಭಾಷಾ ನೀತಿ ತೀರ್ಮಾನದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಕ್ಕಳ ಮೇಲೆ ಮೂರು ಭಾಷೆಗಳ ಕಲಿಕೆ ಒತ್ತಡ ಹಾಕಿದರೆ, ಅವರ ಕಲಿಕೆ ಹಾಗೂ ಗ್ರಹಿಕೆ ಕಡಿಮೆಯಾಗುತ್ತದೆ. ಈ ದೃಷ್ಟಿಯಿಂದ ಶಿಕ್ಷಕರು ಕೈಗೊಂಡಿರುವ ತೀರ್ಮಾನ ಉತ್ತಮವಾಗಿದೆ. ಮಕ್ಕಳು ಎರಡು ಭಾಷೆ ಕಡ್ಡಾಯವಾಗಿ ಕಲಿಯಬೇಕು ಎಂಬುದು ಉತ್ತಮ ನಿರ್ಧಾರ. ಮೂರು ಭಾಷೆ ಕಲಿಯುವುದು ಅವರವರ ವೈಯಕ್ತಿಕ ಅಭಿಲಾಷೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ಈ ನಿರ್ಧಾರ ಟೀಕೆ ಮಾಡುತ್ತಿರುವ ಬಗ್ಗೆ ಕುರಿತು ಪ್ರತಿಕ್ರಿಯಿಸಿದ ಅವರು, ಸರಕಾರ ಯಾವುದೆ ತೀರ್ಮಾನ ಕೈಗೊಂಡರೂ ವಿರೋಧ ಮಾಡಬೇಕು ಎಂಬುದೊಂದೆ ಬಿಜೆಪಿ ನಾಯಕರ ಗುರಿ. ಅವರ ಕೇಂದ್ರ ನಾಯಕರನ್ನು ಮೆಚ್ಚಿಸಲು, ಮನವೊಲಿಸಲು ಹಿಂದಿ ಪರವಾಗಿರಬೇಕು. ಬಿಜೆಪಿ ನಾಯಕರು ತಮ್ಮ ಕೇಂದ್ರ ನಾಯಕರಿಗೆ ಕನ್ನಡವನ್ನು ಎಲ್ಲ ರಾಜ್ಯಗಳಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕು ಎಂದು ಮನವರಿಕೆ ಮಾಡಬೇಕು ಎಂದು ತಿಳಿಸಿದರು.
ತ್ರಿಭಾಷಾ ನೀತಿ ಜಾರಿಗೆ ತಂದಿದ್ದು ಕಾಂಗ್ರೆಸ್, ಈ ನಿರ್ಧಾರ ರಾಜಕೀಯವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವತ್ತಿನ ಪರಿಸ್ಥಿತಿ ಬೇರೆ, ಈಗಿನ ಪರಿಸ್ಥಿತಿ ಬೇರೆ. ಇಂದು ಗುಣಮಟ್ಟದ ಅಗತ್ಯವಿದ್ದು, ಎರಡು ಭಾಷೆಗಳಲ್ಲಿ ಕಲಿಕೆ ಆಗಬೇಕು. ಕನ್ನಡವನ್ನು ಪ್ರಧಾನ ಭಾಷೆಯಾಗಿಟ್ಟುಕೊಂಡು ಉಳಿದ ಮತ್ತೊಂದು ಭಾಷೆ ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗಿದ್ದು, ಇದು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಬಿಟ್ಟ ವಿಚಾರ ಎಂದರು.






