ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಾಲ ನೀಡಲು ನಕಲಿ ದಾಖಲೆ ಸೃಷ್ಟಿ ಮಾಡಿ ಕೋಟ್ಯಾಂತರ ರೂಪಾಯಿಗಳ ಅಕ್ರಮ ನಡೆಸಲಾಗಿದೆ ಎಂಬ ದೂರಿನ ಅನ್ವಯ ಮಂಗಳವಾರದಂದು ಲೋಕಾಯುಕ್ತ ಅಧಿಕಾರಿಗಳ ತಂಡವು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿತು.
2020ರಿಂದ 2023ರವರೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡಿದ್ದ ಗುರುರಾಜ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
ನಿಗಮದ ಜಿಲ್ಲಾ ವ್ಯವಸ್ಥಾಪಕ ವಿಜಯ್ ಕುಮಾರ್, ಅಂದಿನ ಜಿಲ್ಲಾ ವ್ಯವಸ್ಥಾಪಕ ಶ್ರೀಚಂದ್ರ ವಿ.ಗೌಡ, ಅಂದಿನ ಪ್ರಭಾರ ವ್ಯವಸ್ಥಾಪಕಿ ಅಕ್ಷತಾ, ಅಂದಿನ ಕಚೇರಿ ನಿರೀಕ್ಷಕ ಕೇಶವಮೂರ್ತಿ, ತಾಲೂಕು ಅಭಿವೃದ್ಧಿ ಅಧಿಕಾರಿ ಮಾದೇವಿಭಾಯಿ, ನೀಲಮ್ಮ, ವಿಜಯಲಕ್ಷ್ಮಿ ಸೇರಿ ಒಟ್ಟು 8 ಮಂದಿ ಅಧಿಕಾರಿಗಳ ವಿರುದ್ಧ ದೂರು ಕೇಳಿಬಂದಿದ್ದು, ಅವರಲ್ಲಿ ಮೂವರು ಈಗಾಗಲೇ ನಿವೃತ್ತರಾಗಿದ್ದಾರೆ. ಉಳಿದ ಐವರು ನಿಗಮದಲ್ಲೇ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಸಹಕಾರಿ ಸಂಘಗಳು ಮತ್ತು ಸಹಕಾರಿ ಬ್ಯಾಂಕ್‍ಗಳಿಗೆ ನೀಡಬೇಕಿದ್ದ ಸಾಲ ಮಂಜೂರಿನಲ್ಲಿ ಅಕ್ರಮ ನಡೆದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಸುಮಾರು 3 ರಿಂದ 4 ಕೋಟಿ ರೂ. ಅವ್ಯವಹಾರ ನಡೆದಿರುವುದು ಆರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆ ಆರೋಪಿಗಳ ನಿವಾಸ ಸೇರಿ ಬೆಂಗಳೂರು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೂ ಶೋಧ ನಡೆಸಲಾಗಿದೆ. ದಾಳಿ ವೇಳೆ ಕೆಲವು ಪ್ರಾಥಮಿಕ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಮೂಲ ದಾಖಲೆಗಳ ಶೋಧ ಮುಂದುವರಿದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.







