ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರು ಹಿಂದೆ ಸರಿದಿದ್ದಾರೆ.
ಪುತ್ತೂರು ಉಪ ವಿಭಾಗಾಧಿಕಾರಿ 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು.
ಈ ವೇಳೆ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರಲ್ಲದೆ, ರಿಟ್ ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದರು.
ಪ್ರಕರಣದ ಹಿನ್ನೆಲೆ:
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು 2025ರ ನವೆಂಬರ್ 17ರಂದು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗಡಿಪಾರು ಆದೇಶ ಹೊರಡಿಸುವ ಮುನ್ನ ತಿಮರೋಡಿ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ ಎಂದು ಆದೇಶಿಸಿತ್ತು.
ಜತೆಗೆ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಾಲಯ, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ಅಹವಾಲನ್ನೂ ಆಲಿಸಿ, ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಡಿಸೆಂಬರ್ 17ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಮತ್ತೊಮ್ಮೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.







