ಮತದಾರರ ಪಟ್ಟಿ ಲಭ್ಯವಾದ ಕೂಡಲೇ ಸ್ಥಳೀಯ ಸಂಸ್ಥೆ ಚುನಾವಣೆ : ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ

ಸಾಂದರ್ಭಿಕ ಚಿತ್ರ | PC : PTI
ಬೆಂಗಳೂರು : ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತವಾಗಿ ಮತದಾರರ ಪಟ್ಟಿ ಲಭ್ಯವಾದ ತಕ್ಷಣವೇ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಅಮರೇಶ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್ಐಆರ್)ಪ್ರಕ್ರಿಯೆ ಆರಂಭಿಸಿತು. ಆರಂಭದಲ್ಲಿ ಅ.7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ತಿಳಿಸಲಾಗಿತ್ತು. ಬಳಿಕ ಅ.17ಕ್ಕೆ ದಿನಾಂಕ ನಿಗದಿಪಡಿಸಿ, ಅಂತಿಮವಾಗಿ ಅ.27ರಂದು ಪಟ್ಟಿ ಪ್ರಕಟಿಸಲಾಗಿದೆ ಎಂದರು.
ಪ್ರಕಟಿತ ಮತದಾರರ ಪಟ್ಟಿ ಸಾರ್ವಜನಿಕವಾಗಿ ಲಭ್ಯವಿದ್ದರೂ, ಕೇಂದ್ರ ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಲ್ಲ. ಈ ಸಂಬಂಧ ಈಗಾಗಲೇ ಆರೇಳು ಬಾರಿ ಪತ್ರ ಬರೆದು ಮನವಿ ಮಾಡಲಾಗಿದೆ. ಅಲ್ಲದೆ, ಖುದ್ದಾಗಿ ಭೇಟಿ ನೀಡಿ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗವು 2021ರ ಹಳೆಯ ಮತದಾರರ ಪಟ್ಟಿಯನ್ನೇ ನೀಡಿದರೆ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ(ಜಿಬಿಎ) ವ್ಯಾಪ್ತಿಯ ಚುನಾವಣೆಯನ್ನು ತಕ್ಷಣವೇ ನಡೆಸಲು ಸಾಧ್ಯವಿದೆ. ಆದರೆ ಇತ್ತೀಚೆಗೆ ನಡೆದ ಎಸ್ಐಆರ್ ಆಧಾರದ ಮೇಲೆ ಹೊಸ ಮತದಾರರ ಪಟ್ಟಿ ನೀಡಿದರೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಕನಿಷ್ಠ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ ಎಂದು ಹೇಳಿದರು.






