ಎಸೆಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ 29 ಅಂಶಗಳ ಕಾರ್ಯಕ್ರಮ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯಲ್ಲಿ ಎಸೆಸೆಲ್ಸಿ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮವನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಪರಖ ರಾಷ್ಟ್ರೀಯ ಸರ್ವೆಕ್ಷಣಾ ಸಮೀಕ್ಷೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಮತ್ತು ಎಸೆಸೆಲ್ಸಿ ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಇಲಾಖೆ ಹೊರಡಿಸಿರುವ 29 ಅಂಶಗಳ ಆದೇಶವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕ್ರೈಸ್ತ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಾಲೆ, ಕೇಂದ್ರ ಸರ್ಕಾರದದ ಅಡಿಯಲ್ಲಿ ಬರುವ ನವೋದಯ, ಕೇಂದ್ರೀಯ ವಿದ್ಯಾಲಯಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಂದು ಶಾಲೆಗಳ ಮುಖ್ಯ ಶಿಕ್ಷಕರಿಂದ ತಮ್ಮ ಶಾಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಯಾವ ರೀತಿ ಪಾಠ ಬೋಧಿಸಬೇಕು, ಶಾಲೆಯಲ್ಲಿ ಕೈಗೊಳ್ಳಬಹುದಾದ ನಾವೀನ್ಯಯುತ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಮುಕುಲ್ ಜೈನ್ ಮುಖ್ಯ ಶಿಕ್ಷಕರಿಗೆ ಯಾವ ರೀತಿ ಗಣಿತ ಮತ್ತು ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯ ವಿಶ್ಲೇಷಣೆ ಮಾಡಬೇಕು ಎಂಬುದರ ಕುರಿತು ಹಾಗೂ ಬಹು ಆಯ್ಕೆ ಪ್ರಶ್ನೆಗಳಿಗೆ ಹೇಗೆ ಉತ್ತರಿಸಬೇಕು ಎಂಬುದರ ಕುರಿತು ಸವಿವರವಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪ್ರೊಬೆಷನರ್ ಐಎಎಸ್ ಅಧಿಕಾರಿ ರಮ್ಯಾ, ಶಿಕ್ಷಣ ಇಲಾಖೆಯ ಉಪನಿರ್ದೇಶಕ, ಡಯಟ್ ನ ಪ್ರಾಚಾರ್ಯ, ಉಪನ್ಯಾಸಕರು, ಡಿವೈಪಿಸಿ ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.







