Aurad | ಗೃಹಲಕ್ಷ್ಮೀ ಯೋಜನೆ ಮಹಿಳೆಯರ ಸ್ವಾವಲಂಬನೆಗೆ ಹೊಸ ದಿಕ್ಕು: ಚನ್ನಪ್ಪ ಉಪ್ಪೆ

ಔರಾದ್: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾಲೂಕಿನ ಸಂತಪೂರ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಗೃಹಲಕ್ಷ್ಮೀ ದಿನವನ್ನು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚನ್ನಪ್ಪ ಉಪ್ಪೆ, ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆಸರೆಯಾಗಿವೆ. ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹೊಸ ದಿಕ್ಕು ತೋರಿಸಿದ್ದು, ಅರ್ಹ ಫಲಾನುಭವಿಗಳು ಯೋಜನೆಗಳ ಸೌಲಭ್ಯಗಳನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ. ಗೃಹಲಕ್ಷ್ಮೀ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದು, ಕುಟುಂಬದ ನಿರ್ವಹಣೆಯಲ್ಲಿ ಆತ್ಮವಿಶ್ವಾಸದಿಂದ ಮುಂದೆ ಸಾಗುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರಾದ ಶಿವಕುಮಾರ್ ಪಾಟೀಲ್, ಸಲ್ಲಾವುದ್ದಿನ್ ಜಂಬಗಿ ಹಾಗೂ ಸಿಡಿಪಿಒ, ಕೆಇಬಿ, ಆಹಾರ ಇಲಾಖೆ, ಯುವನಿಧಿ, ಸಾರಿಗೆ ಇಲಾಖೆಯ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.






