ಔರಾದ್ | ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ

ಔರಾದ್: ಗ್ರಾಮೀಣ ಜನರಿಗೆ ಉದ್ಯೋಗದ ಜೊತೆಗೆ ಉತ್ತಮ ಆರೋಗ್ಯ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಹೇಳಿದರು.
ತಾಲೂಕಿನ ಧೂಪತಮಹಾಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ ಕಾಮಗಾರಿ ನಿರ್ವಹಿಸುತ್ತಿರುವ ಅಕುಶಲ ಕೂಲಿ ಕಾರ್ಮಿಕರಿಗೆ ಭಾನುವಾರ ಆಯೋಜಿಸಿದ್ದ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಯೋಜನೆಯಡಿ ವಿವಿಧ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು.
ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ ಮಾತನಾಡಿ, ಕಾಮಗಾರಿ ಸ್ಥಳಗಳಲ್ಲಿ ಕೂಲಿ ಕಾರ್ಮಿಕರು ದೈಹಿಕ ಶ್ರಮದ ಕೆಲಸ ಮಾಡುತ್ತಿರುವುದರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಅನೀಲಕುಮಾರ್ ಎಕಲೂರೆ ಮಾತನಾಡಿ, ಕೂಲಿ ಕಾರ್ಮಿಕರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ನಿಯಮಿತ ಆರೋಗ್ಯ ತಪಾಸಣೆಯಿಂದ ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
330 ಕಾರ್ಮಿಕರ ಆರೋಗ್ಯ ತಪಾಸಣೆ :
ಆರೋಗ್ಯ ಇಲಾಖೆ ಸಿಬ್ಬಂದಿಯ ಸಹಯೋಗದಲ್ಲಿ ರಕ್ತದೊತ್ತಡ, ಮಧುಮೇಹ, ಹಿಮೋಗ್ಲೋಬಿನ್ ಪ್ರಮಾಣ, ತೂಕ ಸೇರಿದಂತೆ ಶೀತ, ಕೆಮ್ಮು, ನೆಗಡಿ ಮತ್ತಿತರ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಲಾಯಿತು. ಪುರುಷರು ಹಾಗೂ ಮಹಿಳೆಯರು ಸೇರಿದಂತೆ ಒಟ್ಟು 330 ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಎಚ್ಇಒ ಅನಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂದಕಿಶೋರ್ ಶಾಸ್ತ್ರಿ, ಮಹಾದೇವ್ ಡಾವರಗಾವೆ, ಡಿಇಒ ಪ್ರಕಾಶ್, ಐಇಸಿ ಸಂಯೋಜಕ ಅಂಬಾದಾಸ್ ಪಾಟೀಲ್, ಶರಣಪ್ಪ ಸಾವಳೆ, ಎನ್ ಆರ್ ಎಲ್ ಎಂ ಸಿಬ್ಬಂದಿಯವರು, ಜಿಕೆಎಂ, ಆರೋಗ್ಯ ಇಲಾಖೆ ಸಿಬ್ಬಂದಿಯವರು ಹಾಗೂ ಕೂಲಿ ಕಾರ್ಮಿಕರು ಸೇರಿದಂತೆ ಇತರರು ಹಾಜರಿದ್ದರು.






