Aurad | ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಶಾಸಕ ಪ್ರಭು ಚವ್ಹಾಣ್ ನಿರ್ಲಕ್ಷ್ಯ: ಧನರಾಜ್ ಮುಸ್ತಾಪುರ್ ಆರೋಪ

ಔರಾದ್: ಪಟ್ಟಣದಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದರೂ, ಶಾಸಕ ಪ್ರಭು ಚವ್ಹಾಣ್ ಅವರು ಸಮಸ್ಯೆ ಪರಿಹಾರಕ್ಕೆ ಅಗತ್ಯ ಗಮನಹರಿಸದೆ ವಿವಿಧ ಗ್ರಾಮಗಳಲ್ಲಿ ಸುತ್ತಾಟ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಸಮಾಜಸೇವಕ ಹಾಗೂ ಕಾಂಗ್ರೆಸ್ ಮುಖಂಡ ಧನರಾಜ್ ಮುಸ್ತಾಪುರ್ ಪ್ರಕಟಣೆ ಮೂಲಕ ಆರೋಪಿಸಿದ್ದಾರೆ.
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರ ಮೂಲಭೂತ ಸಮಸ್ಯೆಗೆ ಸ್ಪಂದಿಸಬೇಕಾದ ಶಾಸಕರು ಈ ವಿಚಾರದಲ್ಲಿ ಮೌನ ವಹಿಸಿರುವುದು ಖಂಡನೀಯ. ರಾಜಕೀಯವಾಗಿ ವಿರೋಧ ಪಕ್ಷದವರ ವಿರುದ್ಧ ಆರೋಪ-ಪ್ರತ್ಯಾರೋಪ ಮಾಡುವುದನ್ನು ಬಿಟ್ಟು, ಮೊದಲು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತಕ್ಷಣ ಅಧಿಕಾರಿಗಳ ಸಭೆ ಕರೆದು ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಪಟ್ಟಣದ ಎಲ್ಲ ವಾರ್ಡ್‌ಗಳಿಗೆ ನಿರಂತರವಾಗಿ ಹಾಗೂ ಶಾಶ್ವತವಾಗಿ ಕುಡಿಯುವ ನೀರು ಪೂರೈಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಧನರಾಜ್ ಮುಸ್ತಾಪುರ್ ಆಗ್ರಹಿಸಿದ್ದಾರೆ.




