Aurad | ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ: ಶಾಸಕ ಪ್ರಭು ಚವ್ಹಾಣ

ಔರಾದ್: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸರ್ಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ತಮ್ಮ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವ ಮೂಲಕ ಮಕ್ಕಳ ಪೌಷ್ಟಿಕತೆ, ಮಹಿಳೆಯರ ಆರೋಗ್ಯ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇವರ ಸೇವೆ ಶ್ಲಾಘನೀಯ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.
ಪಟ್ಟಣದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸಂತಪೂರ ವತಿಯಿಂದ ಔರಾದ್ ಮತ್ತು ಕಮಲನಗರ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಗಣತಿ ಸೇರಿದಂತೆ ಸರ್ಕಾರದ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪಡೆಯಲಾಗುತ್ತದೆ. ಆದರೆ, ಅವರ ಕೆಲಸಕ್ಕೆ ಅನುಗುಣವಾಗಿ ಸಂಬಳ ದೊರೆಯುತ್ತಿಲ್ಲ. ಈ ವಿಚಾರವನ್ನು ಅಧಿವೇಶನದಲ್ಲಿಯೂ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದೇನೆ. ಸಂಬಳ ಹೆಚ್ಚಳ, ಆರೋಗ್ಯ ಮತ್ತು ವಿಮೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನ ಗಮನಕ್ಕೆ ತಂದರೆ ಅವುಗಳನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ. ನನ್ನ ಸಹಕಾರ ಸದಾ ಇರುತ್ತದೆ ಎಂದರು.
ಸಮಾಜದಲ್ಲಿ ಇನ್ನೂ ಕಂಡುಬರುತ್ತಿರುವ ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಯನ್ನು ತಡೆಗಟ್ಟುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಪೋಷಕರಲ್ಲಿ ಅರಿವು ಮೂಡಿಸಬೇಕು. ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಸರ್ಕಾರದಿಂದ ದೊರೆಯುವ ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಇತರ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು ಸೇರಿದಂತೆ ಸುಮಾರು 900 ಜನರನ್ನು ಶಾಲು ಹೊದಿಸಿ, ಹೂಹಾರ ಹಾಗೂ ಉಡುಗೊರೆ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಪಾಸ್‌ಬುಕ್ ವಿತರಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವೂ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸುಭಾಷ್ ರತ್ನಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉತ್ತಮ್ ಸಂಗೆವಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ್ ಬಾಳುವಾಲೆ, ವಿಜಯಲಕ್ಷ್ಮಿ, ಶೋಭಾ, ಭಾಗ್ಯವತಿ, ನಿರ್ಮಲಾ, ಶಾಂತಮ್ಮ, ರವಿಕಾ, ರೇಣುಕಾ, ಮಹಾದೇವಿ, ಸುಧೀಷ್ಣಾ, ಪದ್ಮಾವತಿ, ಶ್ರದ್ಧಾ, ಮಂಗಲಾ, ಇಲಾಖೆಯ ಆಕಾಶ, ಸತೀಷ್ ಹಾಗೂ ಶಿವಪುತ್ರ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ನಿರೂಪಿಸಿದರು. ಶೋಭಾವತಿ ವಂದಿಸಿದರು.






