Basavakalyan : ಶಿಷ್ಟಾಚಾರ ಉಲ್ಲಂಘನೆ ಆರೋಪ; DHO, THO ಅಮಾನತು

ಬಸವಕಲ್ಯಾಣ : ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ್ ನೀರಗುಡೆ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಮೈಲಾರೆ ಅವರನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಹಾಗೂ ಶಿಸ್ತು ಪ್ರಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ಭೂಮಿ ಪೂಜೆ ಸಮಾರಂಭದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಹಾಗೂ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಇಬ್ಬರೂ ಅಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಅಮಾನತು ಕ್ರಮಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇಬ್ಬರು ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಸರ್ಕಾರದ ಶಿಷ್ಟಾಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಬಾಕಿ ಇರಿಸಲಾಗಿದೆ. ಅಮಾನತು ಅವಧಿಯಲ್ಲಿ ಜೀವನಾಂಶ ಭತ್ಯೆ ಪಡೆಯುವ ಉದ್ದೇಶಕ್ಕಾಗಿ ಡಾ.ಧ್ಯಾನೇಶ್ವರ್ ನೀರಗುಡೆ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಡಾ.ಅಶೋಕ್ ಮೈಲಾರೆ ಅವರನ್ನು ಕಲಬುರಗಿ ಜಿಲ್ಲೆಯ ಅಫಜಲಪುರ್ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಖಾಲಿಯಿರುವ ಸಂಬಂಧಿತ ಹುದ್ದೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.
ಅಮಾನತುಗೊಂಡ ಅಧಿಕಾರಿಗಳು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಅಮಾನತು ಅವಧಿಯಲ್ಲಿ ತಮ್ಮ ಕೇಂದ್ರ ಸ್ಥಾನವನ್ನು ತೊರೆಯಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.






