Basavakalyan | ಸಿಎಂ ಭೇಟಿ ಬೆನ್ನಲ್ಲೇ ರಸ್ತೆ ಗುಂಡಿ ಮುಚ್ಚಿದ ನಗರಸಭೆ !

ಬಸವಕಲ್ಯಾಣ: ನಗರದ ಪ್ರಮುಖ ರಸ್ತೆಗಳಲ್ಲಿ ತಿಂಗಳುಗಟ್ಟಲೆ ಬಿದ್ದಿದ್ದ ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರೂ ಮೌನವಾಗಿದ್ದ ನಗರಸಭೆ ಅಧಿಕಾರಿಗಳು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 6ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರವಿವಾರ ರಸ್ತೆ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.
ನಗರದ ಹಲವು ರಸ್ತೆಗಳಲ್ಲಿ ಗುಂಡಿಗಳು ಬಿದ್ದ ಪರಿಣಾಮ ವಾಹನ ಸಂಚಾರ ದುಸ್ತರವಾಗಿತ್ತು. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತು ಅಪಘಾತದ ಭೀತಿ ಹೆಚ್ಚಾಗಿದ್ದರೂ ಸಮಸ್ಯೆ ಪರಿಹರಿಸುವಲ್ಲಿ ನಗರಸಭೆ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಹಿಂದೆ ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕೈಗೊಂಡಿದ್ದರೂ, ಕೆಲವೇ ತಿಂಗಳಲ್ಲಿ ಕಾಮಗಾರಿ ಹಾಳಾಗಿ ರಸ್ತೆಗಳು ಮತ್ತೆ ಗುಂಡಿಗಳಿಂದ ಕೂಡಿದ್ದವು. ಇದರಿಂದ ಸಾರ್ವಜನಿಕರು ನಗರಸಭೆಯ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ಈಗ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಶನಿವಾರದಿಂದಲೇ ಅಧಿಕಾರಿಗಳು ರಸ್ತೆ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಕೆಲಸ ಆರಂಭಿಸಿದ್ದು, “ಸಿಎಂ ಬರಲಿರುವ ಕಾರಣಕ್ಕಷ್ಟೇ ದುರಸ್ತಿ ಕೆಲಸ ನಡೆಯುತ್ತಿದೆ” ಎಂಬ ಮಾತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.






