Basavakalyan | ಅಂತಾರಾಷ್ಟ್ರೀಯ ದಿನಾಚರಣೆ ಅಂಗವಾಗಿ ಯುವ ಸಂಸತ್ತು ಕಾರ್ಯಕ್ರಮ

ಬಸವಕಲ್ಯಾಣ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮವು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹಾಗೂ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಈ ವೇಳೆ ಮಾತನಾಡಿದ ತಹಶೀಲ್ದಾರ್ ದತ್ತಾತ್ರೇಯ ಗಾದಾ, ಯುವಕರಿಗೆ ಸಂವಿಧಾನದ ಮೂಲ ಆಶಯ ಹಾಗೂ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ವಿಧಾನಸಭೆ ಹಾಗೂ ಸಂಸತ್ ಅಧಿವೇಶನಗಳಲ್ಲಿ ನಡೆಯುವ ಕಲಾಪದ ಮಾದರಿಯಲ್ಲಿ ಯುವ ಸಂಸತ್ತಿನಲ್ಲಿ ಭಾಗವಹಿಸಿ ಕಲಾಪ ನಡೆಸಬೇಕು ಎಂದು ಹೇಳಿದರು.
ಯುವ ಸಂಸತ್ತು ಕಾರ್ಯಕ್ರಮದಲ್ಲಿ ಅಧಿವೇಶನದ ಕಲಾಪದ ಮಾದರಿಯಲ್ಲಿ ಸಭಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಸಚಿವರು ಹಾಗೂ ಶಾಸಕರ ಪಾತ್ರವನ್ನು ಕಾಲೇಜು ವಿದ್ಯಾರ್ಥಿಗಳು ನಿರ್ವಹಿಸಿದರು. ಕೆಲಕಾಲ ನೈಜ ಅಧಿವೇಶನದಂತೆ ಯುವ ಸಂಸತ್ತಿನ ಕಲಾಪ ನಡೆಯಿತು. ಈ ವೇಳೆ ವಿರೋಧ ಪಕ್ಷದ ಸದಸ್ಯರು ಸರ್ಕಾರದ ವಿವಿಧ ವಿಚಾರಗಳ ಕುರಿತು ಹಲವು ಪ್ರಶ್ನೆಗಳನ್ನು ಕೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿಲೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






