Bidar | ನ.21ರಿಂದ 2 ದಿನಗಳ ಕಾಲ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸುರೇಶ್ ಚನ್ನಶೆಟ್ಟಿ

ಬೀದರ್: ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ನ. 21 ಮತ್ತು 22ರಂದು ನಗರದ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ್ ಚೆನ್ನಶೆಟ್ಟಿ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮ್ಮೇಳನದ ಸಿದ್ಧತೆ ಹಾಗೂ ಕಾರ್ಯಕ್ರಮಗಳ ವಿವರ ನೀಡಿದರು. ಕರ್ನಾಟಕ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ, ಸಾಹಿತಿ ಹಾಗೂ ಚಿಂತಕ ಡಾ. ಬಸವರಾಜ ಬಲ್ಲೂರ ಅವರ ಸರ್ವಾಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ಜಿಲ್ಲೆಯ ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಳೆದ ಹತ್ತು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಜಿಲ್ಲಾ ಕೇಂದ್ರಕ್ಕೆ ಮಾತ್ರ ಸೀಮಿತವಾಗದೆ ಗ್ರಾಮೀಣ ಭಾಗಗಳಲ್ಲಿಯೂ ವೈವಿಧ್ಯಮಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ. ಸಾವಿರಾರು ಕನ್ನಡ ಮನಸ್ಸುಗಳನ್ನು ಒಗ್ಗೂಡಿಸುವ ಪ್ರಯತ್ನ ಮುಂದುವರಿದಿದೆ. ಈ ಬಾರಿಯ ಸಮ್ಮೇಳನವನ್ನು ಜನಸಾಮಾನ್ಯರ ಸಾಹಿತ್ಯೋತ್ಸವವನ್ನಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ನ. 21ರಂದು ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಹಾಗೂ ಚಿಂತಕ ದಿನೇಶ್ ಅಮೀನ್ ಮಟ್ಟು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ದಿವ್ಯ ಸಾನ್ನಿಧ್ಯ ವಹಿಸಿ ಧ್ವಜ ಹಸ್ತಾಂತರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದ ಅಂಗವಾಗಿ ಹೊರತರಲಾಗುವ ‘ಚೌಡಿ’ ಸ್ಮರಣ ಸಂಚಿಕೆಯನ್ನು ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಬಿಡುಗಡೆ ಮಾಡಲಿದ್ದಾರೆ. ಔರಾದ್ ಶಾಸಕ ಪ್ರಭು ಚವ್ಹಾಣ ಅವರಿಗೆ ವಿಶೇಷ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಪುಸ್ತಕ, ಚಿತ್ರಕಲೆ ಹಾಗೂ ವಿವಿಧ ಪ್ರದರ್ಶನ ಮಳಿಗೆಗಳನ್ನು ಜನಪ್ರತಿನಿಧಿಗಳು ಉದ್ಘಾಟಿಸಲಿದ್ದಾರೆ ಎಂದು ವಿವರಿಸಿದರು.
ಮಕ್ಕಳ ಸಾಹಿತ್ಯ ಹಾಗೂ ಪ್ರತಿಭೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ‘ಬೆಳೆವ ಸಿರಿ’ ಶೀರ್ಷಿಕೆಯಡಿ ಮಕ್ಕಳಿಗಾಗಿ ಪ್ರತ್ಯೇಕ ಗೋಷ್ಠಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಭಾಷಣ, ಸಾಹಿತ್ಯಿಕ ಚಟುವಟಿಕೆ, ಸಂಗೀತ ಹಾಗೂ ಕರಾಟೆ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬಾಲಪ್ರತಿಭೆ ವೇದ ಶಶಿಕಾಂತ ಬೊಂಬಳಗೆ ಆಶಯ ನುಡಿಗಳನ್ನಾಡಲಿದ್ದಾರೆ. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದರೊಂದಿಗೆ ಹಲವು ಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಮ್ಮೇಳನದ ಯಶಸ್ಸಿಗಾಗಿ ಸ್ವಾಗತ, ಪ್ರಚಾರ, ಮೆರವಣಿಗೆ, ವೇದಿಕೆ, ಸಾಂಸ್ಕೃತಿಕ, ಆಹಾರ, ವಸತಿ, ಮಹಿಳಾ ಹಾಗೂ ಯುವ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಂಘಟನೆಗಳು ಮತ್ತು ಕನ್ನಡಾಭಿಮಾನಿಗಳು ಪಕ್ಷಾತೀತವಾಗಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಬಾಬು ವಾಲಿ, ಪ್ರಧಾನ ಕಾರ್ಯದರ್ಶಿ ಹಾವಶೆಟ್ಟಿ ಪಾಟೀಲ್, ಕೋಶಾಧ್ಯಕ್ಷ ಜಯರಾಜ್ ಖಂಡ್ರೆ, ಮೆರವಣಿಗೆ ಸಮಿತಿಯ ಅಧ್ಯಕ್ಷ ರಾಜೇಂದ್ರ ಮಣಗೀರೆ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ರೂಪಾ ಪಾಟೀಲ್, ರತ್ನಾ ಪಾಟೀಲ್, ಬಾಬುರಾವ್ ದಾನಿ, ಡಾ. ಶಿವಶಂಕರ್ ಟೋಕರೆ, ಸಿದ್ಧಾರೂಢ ಭಾಲ್ಕೆ, ಟಿ.ಎಂ. ಮಚ್ಚೆ, ಉಮೇಶ್ ಜಾವರೆ, ಶಿವಮೂರ್ತಿ ಮೂಲಗೆ, ಬಸವರಾಜ್ ಬಿರಾದಾರ್ ಹಾಗೂ ದೇವೇಂದ್ರ ಕರಂಜೆ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.






