ಬೀದರ್ | 5 ಕೋಟಿ ರೂ. ವೆಚ್ಚದಲ್ಲಿ ಅರಣ್ಯ ಭವನ ನಿರ್ಮಾಣಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಬೀದರ್ : ನಗರದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಅರಣ್ಯ ಭವನ ಹಾಗೂ 2 ಕೋಟಿ ರೂ. ವೆಚ್ಚದಲ್ಲಿ ನೌಬಾದ್‌ನಲ್ಲಿರುವ ಟ್ರೀ ಪಾಕ್ ಅಭಿವೃದ್ಧಿ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು.
ನಗರದ ನೌಬಾದ್‌ನಲ್ಲಿರುವ ಅರಣ್ಯ ಇಲಾಖೆಯ ಆವರಣದಲ್ಲಿ ಸೋಮವಾರ ನೂತನ ಅರಣ್ಯ ಭವನ ಕಟ್ಟಡ ನಿರ್ಮಾಣ ಹಾಗೂ ವೃಕ್ಷೋದ್ಯಾನ್ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಾನು ಅರಣ್ಯ ಸಚಿವನಿದ್ದ ಅವಧಿಯಲ್ಲಿ ಜಿಲ್ಲೆಯಲ್ಲಿ ಹಸಿರು ಪರಿಸರವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವುದರೊಂದಿಗೆ ಹಾಗೂ ಸಾರ್ವಜನಿಕರಿಗೆ ಉತ್ತಮ ಉದ್ಯಾನವನಗಳನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗಿದೆ ಎಂದರು.
ಭಾಲ್ಕಿ ತಾಲ್ಲೂಕಿನ ಇಂಚೂರು ಗ್ರಾಮದಲ್ಲಿ ಈಗಾಗಲೇ ಉದ್ಘಾಟಿಸಿರುವ ಟ್ರೀ ಪಾರ್ಕ್ ಬೀದರ್ ಜಿಲ್ಲೆಯ ಪ್ರಮುಖ ಆಕರ್ಷಣೆಯ ಕೇಂದ್ರವಾಗಿ ರೂಪುಗೊಂಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬಗಳು ಹಾಗೂ ಮಕ್ಕಳು ಅಲ್ಲಿಗೆ ಭೇಟಿ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ. ಇದೇ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಆಕರ್ಷಕ ಟ್ರೀ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ವಿನೋದಕುಮಾರ್ ಅಪ್ಪೆ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲರಾವ್, ಪ್ರಾದೇಶಿಕ ಉಪ ಅರಣ್ಯ ಸರಂಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಲೋಕೋಪಯೋಗಿ ಇಲಾಖೆಯ ಇಇ ಶಿವಶಂಕರ ಕಾಮಶೆಟ್ಟಿ, ಸಾಮಾಜಿಕ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಎರಡೋಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಹೇಮಾ, ವಲಯ ಅರಣ್ಯಾಧಿಕಾರಿ ಪ್ರವೀಣ್ ಮೋರೆ ದೇರಿದಂತೆ ಶಾಲಾ ಮಕ್ಕಳು ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.






