ಬೀದರ್ | ಬಕ್ರೀದ್ ಹಬ್ಬದ ಪ್ರಯುಕ್ತ ಸೌಹಾರ್ದ ಸಭೆ
ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದರೆ ಕ್ರಮ : ಹೆಚ್ಚುವರಿ ಪೊಲೀಸ್ ಅಧೀಕ್ಷಕರು

ಬೀದರ್ : ಬಕ್ರೀದ್ ಹಬ್ಬದ ಪ್ರಯುಕ್ತ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಇಂದು ಮುಸ್ಲಿಂ ಹಾಗೂ ಹಿಂದೂ ಸಮುದಾಯಗಳ ಮುಖಂಡರ ಜೊತೆಗೆ ಸೌಹಾರ್ದತೆ ಸಭೆ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಚಂದ್ರಕಾಂತ್ ಪೂಜಾರಿ ಅವರ ನೇತೃತ್ವದಲ್ಲಿ ಈ ಸಭೆಯು ಜರುಗಿದ್ದು, ಸಭೆಯಲ್ಲಿ ಜಿಲ್ಲೆಯಲ್ಲಿರುವ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯಿಂದ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.
ಗೋವುಗಳ ಹತ್ಯೆ, ಅಕ್ರಮ ಗೋ ಸಾಗಾಟವನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್, ದ್ವೇಷ ಭಾಷಣ ಮಾಡಬಾರದು. ವಿವಾದಾತ್ಮಕ ಅಂಶಗಳು ಪೋಸ್ಟ್, ವಿಡಿಯೋ ಮಾಡಬಾರದು. ಒಂದು ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಈ ವೇಳೆ ಎಚ್ಚರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಬೀದರ್ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶಿವನಗೌಡ ಪಾಟೀಲ್, ಭಾಲ್ಕಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಶಿವಾನಂದ್ ಪವಾಡಶೆಟ್ಟಿ ಹಾಗೂ ಹುಮನಾಬಾದ್ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಜೆ.ಎಸ್ ನ್ಯಾಮೇಗೌಡ ಸೇರಿದಂತೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಅನೇಕ ಮುಖಂಡರು ಉಪಸ್ಥಿತರಿದ್ದರು.







