Bidar | ಗೋವುಗಳ ಅಕ್ರಮ ಸಾಗಣೆ ಆರೋಪ: 7 ದಿನಗಳಲ್ಲಿ ತನಿಖಾ ವರದಿ ನೀಡಲು ಈಶ್ವರ್ ಖಂಡ್ರೆ ಸೂಚನೆ

ಬೀದರ್: ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕರಕನಳ್ಳಿ ಗ್ರಾಮದ ಬಕ್ಕಪ್ರಭು ಮುಜರಾಯಿ ದೇವಾಲಯಕ್ಕೆ ಭಕ್ತರು ನೀಡಿದ್ದ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಲಕ್ಷಾಂತರ ಭಕ್ತರು ನಡೆದುಕೊಳ್ಳುವ ಬಕ್ಕಪ್ರಭು ದೇವಾಲಯಕ್ಕೆ ಭಕ್ತರು ನೀಡಿದ್ದ ಗೋವುಗಳನ್ನು ರಾತ್ರೋರಾತ್ರಿ ಟ್ಯಾಂಕರ್ ಮೂಲಕ ಕಸಾಯಿಖಾನೆಗೆ ಸಾಗಿಸಲು ಪ್ರಯತ್ನಿಸಲಾಗಿದೆ. ಸಾರ್ವಜನಿಕರ ಮಧ್ಯಪ್ರವೇಶದಿಂದ ಈ ಅಕ್ರಮ ತಡೆಯಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಿದ್ದಾರೆ.
ದೇವಾಲಯದ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳೇ ಈ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವರು ತಿಳಿಸಿದ್ದಾರೆ.
ಶ್ರೀ ಬಕ್ಕಪ್ರಭು ದೇವಾಲಯಕ್ಕೆ ಸಂಬಂಧಿಸಿದ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಜಿಲ್ಲಾಧಿಕಾರಿಗಳು ಖುದ್ದು ಗಮನಹರಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ಆರೋಪಗಳಲ್ಲಿ ಸತ್ಯಾಂಶ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.






