ಬೀದರ್| ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಿಗೆ ಅರ್ಜಿ ಆಹ್ವಾನ

ಬೀದರ್ : ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ 250 ವಸತಿ ರಹಿತ ಕುಟುಂಬಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಯೋಗಿಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಡಾ.ಬಿ.ಆರ್.ಅಂಬೇಡ್ಕರ್ ವಸತಿಯೋಜನೆಯಡಿ ಬೀದರ್ ಜಿಲ್ಲೆಯ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯಕ್ಕೆ 150 ಮನೆಗಳು ಹಾಗೂ ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯಕ್ಕೆ 100 ಮನೆಗಳು ಸೇರಿ ಒಟ್ಟು 250 ಮನೆಗಳ ಗುರಿಯನ್ನು ನಿಗದಿಪಡಿಸಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಹ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಕಚೇರಿಯಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಜೂ. 10ರ ಒಳಗೆ ಅರ್ಜಿಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.




