ಬೀದರ್ | ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ್ : ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಾಗಿ ಪ್ರವೇಶ ಪಡೆಯಲು ಬಯಸುವ ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್‌ಸಿ, ಎಸ್‌ಟಿ ಅವರಿಗೆ 2.50 ಲಕ್ಷ ರೂ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಜಿಯನ್ನು ಜೂನ್ 16ರ ಒಳಗಾಗಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 80507 70004 ಮತ್ತು 80507 70005 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







