Bidar | ಖುಷಿನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಭೀಮ್ ಆರ್ಮಿ ಆಗ್ರಹ

ಬೀದರ್: ನಗರದ ವಾರ್ಡ್ ಸಂಖ್ಯೆ 13ರ ಖುಷಿನಗರ (ಪುಕಟನಗರ) ಬಡಾವಣೆಯಲ್ಲಿ ಕಳೆದ 6–7 ತಿಂಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಇದನ್ನು ಶಾಶ್ವತವಾಗಿ ಪರಿಹರಿಸಬೇಕು ಎಂದು ಆಗ್ರಹಿಸಿ ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ಸಂಘಟನೆ ಮಹಾನಗರ ಪಾಲಿಕೆ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಿತು.
ಮನವಿಯಲ್ಲಿ, ಬಡಾವಣೆಯ ಮಹಿಳೆಯರು, ಹಿರಿಯ ನಾಗರಿಕರು, ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಕುಡಿಯುವ ನೀರಿಗಾಗಿ ತಗ್ಗು ಪ್ರದೇಶದಲ್ಲಿರುವ ನೀರಿನ ಟ್ಯಾಂಕ್‌ಗೆ ತೆರಳಿ ನೀರು ತಂದು, ಎತ್ತರ ಪ್ರದೇಶದಲ್ಲಿರುವ ಮನೆಗಳಿಗೆ ಮೆಟ್ಟಿಲು ಹತ್ತಿ ಸಾಗಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದೂರಲಾಗಿದೆ.
ಈ ಕುರಿತು ಹಲವು ಬಾರಿ ಸ್ಥಳೀಯ ಶಾಸಕ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಸಂಘಟನೆ ತಿಳಿಸಿದೆ.
ಕೂಡಲೇ ವಾರ್ಡ್ ಸಂಖ್ಯೆ 13ರ ಖುಷಿನಗರ ಬಡಾವಣೆಯ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬೇಕು. ಇಲ್ಲವಾದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಮಹಾನಗರ ಪಾಲಿಕೆ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ದೀಲಿಪಕುಮಾರ್ ವರ್ಮಾ, ಅಧ್ಯಕ್ಷ ಶ್ರೀಕಾಂತ್ ಸಾಗರ್, ರಾಜ್ಯ ಉಪಾಧ್ಯಕ್ಷ ಅಶೋಕ್ ಭಾವಿದೊಡ್ಡಿ, ಪ್ರಧಾನ ಕಾರ್ಯದರ್ಶಿ ಸುದರ್ಶನ್ ಭಾಗ್ಯಕರ್, ಬಡಾವಣೆಯ ನಿವಾಸಿಗಳಾದ ಶೀಲಾ, ಶ್ರೀದೇವಿ, ಸಂಪತ್ತಿ, ತುಕಮ್ಮಾ, ಆಶಾ, ರೇಷ್ಮಾ, ಫುಲಾಬಾಯಿ, ಪ್ರಭಾತಿ ಹಾಗೂ ಪ್ರೇಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.






