ಬೀದರ್ | 4 ತಿಂಗಳ ಬಾಕಿ ಸಂಬಳ ಪಾವತಿಗಾಗಿ ಸಚಿವ ಈಶ್ವರ್ ಖಂಡ್ರೆಗೆ ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಮನವಿ

ಬೀದರ್ : ಸುಮಾರು 4 ತಿಂಗಳ ಬಾಕಿ ಸಂಬಳ ಪಾವತಿ ಮಾಡಿಸಬೇಕು ಎಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಬ್ರಿಮ್ಸ್ ಆಸ್ಪತ್ರೆಯ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಸಿಬ್ಬಂದಿಗಳು ಮನವಿ ಪತ್ರ ಸಲ್ಲಿಸಿದರು.
ಇಂದು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರಿಗೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಸಲ್ಲಿಸಿದ ಮನವಿ ಪತ್ರದಲ್ಲಿ, ಬ್ರಿಮ್ಸ್ ನ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಸಿಬ್ಬಂದಿಗಳ 4 ತಿಂಗಳ ವೇತನವು ಸಮಯಕ್ಕೆ ಸರಿಯಾಗಿ ಪಾವತಿಯಾಗಲಿಲ್ಲ. ಆದ್ದರಿಂದ ಕುಟುಂಬ ನಿರ್ವಹಣೆಗೆ ತುಂಬಾ ಕಷ್ಟಕರವಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ತಿಳಿಸಲಾಗಿದೆ.
ದಯಮಾಡಿ ತಾವು 4 ತಿಂಗಳ ವೇತನವನ್ನು ತುರ್ತಾಗಿ ಪಾವತಿ ಮಾಡಿಸಿಕೊಡುವಂತೆ ಹಾಗೂ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವೇತನ ಪಾವತಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಅಲ್ಲದೇ ನಾವು ಸಂಬಳ ಕೇಳುವುದಕ್ಕೆ ಹೋದರೆ ನಮ್ಮನ್ನು ಕೆಲಸದಿಂದ ತೆಗೆದುಹಾಕುತ್ತೇವೆ ಎಂದು ಬೆದರಿಕೆ ಹಾಕಲಾಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಮನವಿ ಪತ್ರ ಸ್ವೀಕರಿಸಿದ ಸಚಿವ ಈಶ್ವರ್ ಖಂಡ್ರೆ ಅವರು, ಈಗಾಗಲೇ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಕೋರಿದ್ದು, ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆದಷ್ಟು ಶೀಘ್ರದಲ್ಲಿ ಬ್ರಿಮ್ಸ್ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುವುದು. ನಿಮ್ಮ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಿ ಕೇಳುತ್ತೇನೆ ಎಂದು ಭರವಸೆ ನೀಡಿದರು.







