Bidar | ಗಣೇಶ ಹಬ್ಬವು ಶಾಂತಿ, ಸೌಹಾರ್ದತೆಯಿಂದ ಆಚರಣೆ ಮಾಡಿ : ಎಸ್ಪಿ ಪ್ರದೀಪ್ ಗುಂಟಿ
ನಿಯಮ ಪಾಲಿಸದವರ ಮೇಲೆ ಸೂಕ್ತ ಕಾನೂನು ಕ್ರಮದ ಎಚ್ಚರಿಕೆ

ಬೀದರ್: ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಕಾನೂನುಬದ್ಧವಾಗಿ ಆಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸಾರ್ವಜನಿಕರು ಹಾಗೂ ಗಣೇಶ ಮಂಡಳಿಗಳಿಗೆ ಮನವಿ ಮಾಡಿದ್ದಾರೆ.
ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಸೆಪ್ಟೆಂಬರ್ 14ರಿಂದ 24ರವರೆಗೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲ ಗಣೇಶ ಮಂಡಳಿಗಳು ಪೊಲೀಸ್ ಇಲಾಖೆಯ ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.
ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆ ವೇಳೆ ಮಂಡಳಿಯ ಸದಸ್ಯರು ಮತ್ತು ಸ್ವಯಂಸೇವಕರು ನಿರಂತರ ನಿಗಾ ವಹಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಗಣೇಶ ದರ್ಶನಕ್ಕೆ ಬರುವ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆ ಕಲ್ಪಿಸಿ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಸ್ವಯಂಸೇವಕರನ್ನು ನಿಯೋಜಿಸಬೇಕು ಎಂದು ತಿಳಿಸಿದ್ದಾರೆ.
ಧ್ವನಿವರ್ಧಕ ಬಳಕೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗಣೇಶ ವಿಸರ್ಜನೆ ವೇಳೆ ಕರ್ಕಶ ಡಿಜೆ ಸೌಂಡ್ ಬಳಕೆಗೆ ಸಂಪೂರ್ಣ ನಿರ್ಬಂಧವಿದ್ದು, ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಘೋಷಣೆಗಳು ಹಾಗೂ ಹಾಡುಗಳನ್ನು ಬಳಸುವುದು ನಿಷೇಧಿಸಲಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸುಳ್ಳು ಸುದ್ದಿ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.






