Bidar | ಸೋನಂ ವಾಂಗ್ಚುಕ್ ಬಂಧನ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಬೀದರ್: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಸಿಪಿಐ(ಎಂ) ಹಾಗೂ ಸಿಐಟಿಯು ನೇತೃತ್ವದಲ್ಲಿ ಸೋಮವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಅವರ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕಾಳಜಿ ತೋರಿಲ್ಲ. ಈ ವಿಚಾರವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನೂ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಸಾವಿತ್ರಿ ಮಾತನಾಡಿ, ಅಧಿಕಾರಕ್ಕೆ ಬರುವ ಮುನ್ನ ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಇಂದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಗಳನ್ನೂ ನಿರ್ಲಕ್ಷಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಪ್ರಧಾನಿ ಹಾಗೂ ಕೇಂದ್ರ ಶಿಕ್ಷಣ ಸಚಿವರು ಸ್ಪಂದಿಸಿಲ್ಲ ಎಂದು ಟೀಕಿಸಿದರು.
ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಲಾಗುತ್ತಿದೆ. ಇಂತಹ ದುರಾಡಳಿತವನ್ನು ದೇಶ ಒಪ್ಪುವುದಿಲ್ಲ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಸಂಬಂಧಪಟ್ಟವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶ್ರೀದೇವಿ ಚೂಡೆ, ಶಂಕುತಲಾ ಸೋನಿ ಹಾಗೂ ಬಸವರಾಜ್ ಮಾಳಗೆ ಸೇರಿದಂತೆ ಇತರರು ಇದ್ದರು.






