Bidar | ಸೋನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ಬೆಂಬಲ

ಬೀದರ್: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಲಡಾಖ್‌ನ ಪರಿಸರ ಮತ್ತು ಸ್ಥಳೀಯರ ಹಕ್ಕುಗಳ ರಕ್ಷಣೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ಬೆಂಬಲ ಸೂಚಿಸಿ ದಲಿತ ವಿದ್ಯಾರ್ಥಿ ಪರಿಷತ್ ಶನಿವಾರ ಧರಣಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.
ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿದ ಪ್ರತಿಭಟನಾಕಾರರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಂದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ಭಗ್ನಗೊಂಡಿದೆ. ಇದು ಸಂವಿಧಾನ ನೀಡಿರುವ ಸಮಾನತೆ ಹಾಗೂ ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದ್ದು, ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ–2024ರಡಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಕಾರ್ಯವೈಖರಿಯ ಕುರಿತು ಸಮಗ್ರ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಲಡಾಖ್‌ನ ಪರಿಸರ, ಸ್ಥಳೀಯ ಸಂಸ್ಕೃತಿ ಹಾಗೂ ಜನರ ಹಕ್ಕುಗಳ ರಕ್ಷಣೆಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಲಡಾಖ್‌ಗೆ ಸಂವಿಧಾನದ ಆರನೇ ಅನುಸೂಚಿಯಡಿ ವಿಶೇಷ ಸ್ವಾಯತ್ತ ಸ್ಥಾನಮಾನ ನೀಡಬೇಕು ಹಾಗೂ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಗೌರವಿಸಬೇಕು ಎಂದು ಮನವಿ ಮಾಡಿದರು.
ನೀಟ್ ಹಗರಣದ ಸಮಗ್ರ ತನಿಖೆಗೆ ಆದೇಶಿಸುವುದರ ಜೊತೆಗೆ ಕೇಂದ್ರ ಸರ್ಕಾರದಿಂದ ಶಿಕ್ಷಣ ಸಚಿವರ ರಾಜೀನಾಮೆ ಪಡೆಯುವಂತೆ ರಾಷ್ಟ್ರಪತಿಗಳು ನಿರ್ದೇಶನ ನೀಡಬೇಕು. ಸೋನಮ್ ವಾಂಗ್ಚುಕ್ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಸಂವಿಧಾನದ ಚೌಕಟ್ಟಿನೊಳಗೆ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಮಾಲೆ, ಭಾಲ್ಕಿ ತಾಲೂಕು ಸಂಚಾಲಕ ಮಹಾದೇವ್, ಔರಾದ್ ತಾಲೂಕು ಸಂಚಾಲಕ ಆನಂದ್ ಕಾಂಬಳೆ, ವಿಠಲದಾಸ್ ಪ್ಯಾಗೆ, ರಮೇಶ್ ಡಾಕುಳಗಿ, ಬಾಬು ಪಾಸ್ವಾನ್, ಶ್ರೀಪತರಾವ್ ದಿನೆ, ಶಿವಕುಮಾರ್ ನೀಲಿಕಟ್ಟಿ, ಪ್ರದೀಪ್ ನಾಟೇಕರ್, ಸುರೇಶ್ ಜೋಜನಾಕರ್, ಸಾಯಿ ಸಿಂಧೆ, ರಮೇಶ್ ಪಾಸ್ವಾನ್, ಗೋಪಾಲ್ ದೊಡ್ಡಿ, ಸಂಗಮೇಶ್ ಭಾವಿದೊಡ್ಡಿ, ಬಸವರಾಜ್ ಭಾವಿದೊಡ್ಡಿ ಹಾಗೂ ಜನಾರ್ಧನ್ ದೀನೆ ಸೇರಿದಂತೆ ಅನೇಕರು ಇದ್ದರು.






