Bidar | ಮೀಸಲಾತಿ ಹೆಚ್ಚಳ ರದ್ದು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಆಗ್ರಹ

ಬೀದರ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಅ.12ರ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಶುಕ್ರವಾರ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಮೀಸಲಾತಿ ಹೆಚ್ಚಳದ ಆದೇಶವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಿ ಕಾನೂನು ರಕ್ಷಣೆ ಒದಗಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯಬೇಕು ಎಂದು ಒತ್ತಾಯಿಸಲಾಗಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ವರದಿಯ ಆಧಾರದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಇದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ಏರಿಕೆಯಾಗಿತ್ತು. ಆದರೆ, ಹೈಕೋರ್ಟ್ ಈ ಆದೇಶವನ್ನು ರದ್ದುಗೊಳಿಸಿರುವುದರಿಂದ ಪರಿಶಿಷ್ಟ ಸಮುದಾಯಗಳ ಹಕ್ಕುಗಳಿಗೆ ಧಕ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟವನ್ನು ಮುಂದುವರಿಸಬೇಕು ಎಂದು ಸಮಿತಿಯ ಮುಖಂಡರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಹ ಸಂಚಾಲಕ ಧನರಾಜ್ ಮುಸ್ತಾಪೂರೆ, ತಾಲೂಕು ಸಹ ಸಂಚಾಲಕ ಜೈಪ್ರಕಾಶ್ ಅಷ್ಟೂರೆ, ಜಿಲ್ಲಾ ಸಹ ಸಂಚಾಲಕ ವಿಜಯಕುಮಾರ್ ಐಹೊಳೆ, ತಾಲೂಕು ಸಹ ಸಂಚಾಲಕ ಗುಂಡಪ್ಪ ದಂಡೆ, ಜಿಲ್ಲಾ ಸಂಚಾಲಕ ಅನೀಲಕುಮಾರ್ ಬಡಿಗೇರ್, ಬಸವರಾಜ್ ಭಾವಿದೊಡ್ಡಿ, ಉಮೇಶ್ ಮುಗನೂರ್ ಹಾಗೂ ಗುಂಡಪ್ಪ ಜಾಂತೆ ಉಪಸ್ಥಿತರಿದ್ದರು.






