ಬೀದರ್ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ಬಿಡುಗಡೆಗೊಳಿಸಲು ಆಗ್ರಹ

ಬೀದರ್ : ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಮಾನವೀಯತೆ ಮತ್ತು ವೈಜ್ಞಾನಿಕ ಮಾನದಂಡಗಳ ಆಧಾರದಲ್ಲಿ ಸಮರ್ಪಕ ಪರಿಹಾರ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ವರದಿಯನ್ನು ಆಧರಿಸಿ, ಸಂತ್ರಸ್ತರಿಗೆ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಒತ್ತಾಯಿಸಿದೆ.
ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಹಾಗೂ ಬೀದರ್ ಜಿಲ್ಲಾ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ ಅವರ ನೇತೃತ್ವದ ನಿಯೋಗವು ರವಿವಾರ ಭಾಲ್ಕಿಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸಕ್ಕೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿತು.
ಈ ಸಂದರ್ಭದಲ್ಲಿ, ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಸಚಿವರು ವಿಶೇಷ ಗಮನಹರಿಸಿ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ಸಮರ್ಪಕ ಪರಿಹಾರವನ್ನು ಶೀಘ್ರವಾಗಿ ಒದಗಿಸಬೇಕು ಎಂದು ಮನವಿ ಮಾಡಲಾಯಿತು.
ಕಾರಂಜಾ ಮುಳುಗಡೆ ಸಂತ್ರಸ್ತರ ದೀರ್ಘಕಾಲದ ಹೋರಾಟವನ್ನು ಪರಿಗಣಿಸಿ, ರಾಜ್ಯ ಸರ್ಕಾರವು ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಿತ್ತು. ಈ ಸಮಿತಿಯ ಅಧಿಕೃತ ವರದಿಯನ್ನು ಡಿಸೆಂಬರ್ 2025ರ ಅಂತ್ಯದಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ವರದಿ ಈಗಾಗಲೇ ಸರ್ಕಾರದ ಕೈ ಸೇರಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಸಂತ್ರಸ್ತರಿಗೆ ಪರಿಹಾರ ವಿತರಿಸಬೇಕು ಎಂದು ನಿಯೋಗವು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ರಾಜಪ್ಪ ಕಮಲಪೂರೆ, ಡಾ. ರಾಜಶೇಖರ್ ರಂಜೋಳ್, ಮಾದಪ್ಪ ಕೌದೆ, ಇಸೂಫಮಿಯಾ ರೇಕುಳಗಿ, ಮಹಮ್ಮದ್ ಸೋಲಾಪೂರೆ, ಮಹೇಶ್ ಕಮಲಪೂರೆ, ಚಂದ್ರಶೇಖರ್ ಮುತ್ತಣ್ಣ, ಶಂಕರೆಪ್ಪ ಮೂಲಗಿ, ಲಕ್ಷ್ಮೀ ಕೌದೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.







