ಬೀದರ್ | 6ನೇ ತರಗತಿಯ ವಸತಿ ಶಾಲೆ ಪ್ರವೇಶ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಶಿಲ್ಪಾ ಶರ್ಮಾ
ಬೀದರ್ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿ ಪ್ರವೇಶ ಪರೀಕ್ಷೆ ಫೆ.15 ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 22 ಪರೀಕ್ಷೆ ಕೇಂದ್ರಗಳಿದ್ದು, ಒಟ್ಟು 6,644 ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ. ಬೀದರ್ ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ 1,518 ವಿದ್ಯಾರ್ಥಿ, ಬಸವಕಲ್ಯಾಣದ 5 ಪರೀಕ್ಷಾ ಕೇಂದ್ರಗಳಲ್ಲಿ 1,430 ವಿದ್ಯಾರ್ಥಿ, ಭಾಲ್ಕಿಯ 3 ಪರೀಕ್ಷಾ ಕೇಂದ್ರಗಳಲ್ಲಿ 821 ವಿದ್ಯಾರ್ಥಿ, ಔರಾದನ 3 ಪರೀಕ್ಷಾ ಕೇಂದ್ರಗಳಲ್ಲಿ 1,143 ವಿದ್ಯಾರ್ಥಿ, ಹುಮನಾಬಾದ್ ನ 3 ಪರೀಕ್ಷಾ ಕೇಂದ್ರಗಳಲ್ಲಿ 684 ವಿದ್ಯಾರ್ಥಿ, ಕಮಲನಗರದ 1 ಪರೀಕ್ಷಾ ಕೇಂದ್ರದಲ್ಲಿ 310 ವಿದ್ಯಾರ್ಥಿ, ಚಿಟಗುಪ್ಪಾದ 1 ಪರೀಕ್ಷಾ ಕೇಂದ್ರದಲ್ಲಿ 528 ವಿದ್ಯಾರ್ಥಿ ಹಾಗೂ ಹುಲಸೂರಿನ 1 ಪರೀಕ್ಷಾ ಕೇಂದ್ರದಲ್ಲಿ 210 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಒಟ್ಟು 100 ಅಂಕದ ಬಹು ಆಯ್ಕೆ ಪ್ರಶ್ನೆಗಳು ಇರಲಿವೆ. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಕಂಡು ಬಂದರೆ, ಅದಕ್ಕೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರನ್ನು ನೇರ ಹೊಣೆಗಾರನಾಗಿ ಮಾಡಲಾಗುವುದು. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ್ ಶಬಾದಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.







