ಬೀದರ್ | ಭಿಕ್ಷಾಟನೆಯಲ್ಲಿ ತೊಡಗಿದ್ದ 19 ಜನರ ರಕ್ಷಣೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಳ ಪರಿಶೀಲನೆ ನಡೆಸಿ, ಭಿಕ್ಷಾಟನೆ ನಡೆಸುತ್ತಿದ್ದ 19 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಭಿಕ್ಷಾಟನೆ ನಡೆಸುತ್ತಿದ್ದ19 ಜನರಲ್ಲಿ 14 ಮಕ್ಕಳಿದ್ದು, ಅವರಲ್ಲಿ ಎರಡು ಮಕ್ಕಳನ್ನು ಜಿಲ್ಲಾ ಆರೋಗ್ಯ ಕೇಂದ್ರ (ಬ್ರೀಮ್ಸ್) ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗಾಗಿ ದಾಖಲು ಮಾಡಲಾಗಿದೆ. 12 ಮಕ್ಕಳು ಹಾಗೂ ಮೂವರು ಮಹಿಳೆಯರನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿನದಲ್ಲಿ ಬರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸೇರಿಸಲಾಗಿದೆ. ಇಬ್ಬರು ಪುರುಷರನ್ನು ಬೀದರ್ ನಗರಸಭೆ ವ್ಯಾಪ್ತಿಯಲ್ಲಿ ಬರುವಂತಹ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಸರ್ಕಾರವು ಭಿಕ್ಷಾಟನೆ ನಿಯಂತ್ರಣಕ್ಕಾಗಿ ಕರ್ನಾಟಕ ಭಿಕ್ಷಾಟನೆ ನಿಷೇಧ ಅಧಿನಿಯಮ 1975 ರ ಕಾಯ್ದೆಯಂತೆ ಭಿಕ್ಷಾಟನೆ ಮಾಡುವುದು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ಭಿಕ್ಷಾಟನೆಯಲ್ಲಿ ತೊಡಗಿರುವುದು ಕಂಡುಬಂದರೆ, ಕೂಡಲೇ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





