Bidar | ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು: ಮುಹಮ್ಮದ್ ಜಾಫರ್ ಸಾದಿಕ್
ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮ

ಬೀದರ್: ಪರಿಸರ ಹಾಳು ಮಾಡುವುದನ್ನು ಕಂಡಾಗ ವಿದ್ಯಾರ್ಥಿಗಳು ಅದನ್ನು ತಡೆಯಲು ಮುಂದಾಗಬೇಕು. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು. ವಾಹನ ಚಲಾಯಿಸುವ ಪ್ರತಿಯೊಬ್ಬ ಸವಾರರೂ ಕಡ್ಡಾಯವಾಗಿ ಸಸಿ ನೆಡಬೇಕು. ಒಂದು ಸಸಿ ನೆಟ್ಟರೆ ನಮಗೆ ಫಲ, ನೆರಳು ಹಾಗೂ ಶುದ್ಧ ಗಾಳಿ ದೊರೆಯುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮುಹಮ್ಮದ್ ಜಾಫರ್ ಸಾದಿಕ್ ಹೇಳಿದರು.
ನಗರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಶರಣಬಸವೇಶ್ವರ ಪಿಯು ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಾಹನಗಳ ಸೈಲೆನ್ಸರ್‌ಗಳನ್ನು ಬದಲಾಯಿಸಿ ಹೆಚ್ಚಿನ ಶಬ್ದ ಉಂಟು ಮಾಡುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು, ಶಬ್ದ ಮಾಲಿನ್ಯ ಹಾಗೂ ಹಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ತಂದೆ, ಅಣ್ಣ-ತಮ್ಮಂದಿರು ಹಾಗೂ ಸಂಬಂಧಿಕರಿಗೆ ವಾಹನಗಳ ಸೈಲೆನ್ಸರ್‌ಗಳನ್ನು ಬದಲಾಯಿಸದಂತೆ ತಿಳಿಸಬೇಕು ಎಂದರು.
ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಥವಾ ಸಂಚಾರ ದಟ್ಟಣೆಯಲ್ಲಿ 15 ಸೆಕೆಂಡುಗಳಿಗಿಂತ ಹೆಚ್ಚು ಸಮಯ ವಾಹನ ನಿಂತಿದ್ದರೆ ಎಂಜಿನ್ ಆಫ್ ಮಾಡಬೇಕು. ಇದರಿಂದ ವಾಯು ಮಾಲಿನ್ಯವನ್ನು ಕಡಿಮೆ ಮಾಡಬಹುದು. ಹಳೆಯ ಬಿಎಸ್-2 ವಾಹನಗಳ ಬಳಕೆಯಿಂದ ಮಾಲಿನ್ಯ ಹೆಚ್ಚಾಗಿ ಮಕ್ಕಳಲ್ಲಿ ಕೆಮ್ಮು, ಅಸ್ತಮಾ ಹಾಗೂ ಉಸಿರಾಟದ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ವಾಹನಗಳನ್ನು ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಜಾಗರೂಕತೆಯಿಂದ ಚಲಾಯಿಸಿದರೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಾಯಗಳ ತೀವ್ರತೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಅತಿಯಾದ ವೇಗದಲ್ಲಿ ವಾಹನ ಚಲಾಯಿಸಬಾರದು ಎಂದು ಸಲಹೆ ನೀಡಿದರು.
ಶರಣಬಸವೇಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ಡಾ. ಸತೀಶ್ ಪ್ರತಾಪುರ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ವಹಿಸಿ ತಮ್ಮ ಕುಟುಂಬದವರಿಗೂ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಸಸಿ ನೆಟ್ಟು ಪರಿಸರ ಉಳಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಾಯು ಮಾಲಿನ್ಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಭಾಗ್ಯವಂತಿ ಮೋಟರ್ ಡ್ರೈವಿಂಗ್ ಸ್ಕೂಲ್‌ನ ಪ್ರಾಚಾರ್ಯ ಶಿವರಾಜ್ ಜಮಾದಾರ್ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.






