Bidar | ವಿದ್ಯುತ್ ಖಾಸಗೀಕರಣಕ್ಕೆ ರೈತ ಸಂಘದಿಂದ ವಿರೋಧ: ಟಾಟಾ ಪವರ್ ಅರ್ಜಿ ತಿರಸ್ಕರಿಸುವಂತೆ ಆಗ್ರಹ

ಬೀದರ್: ರಾಜ್ಯದಲ್ಲಿ ವಿದ್ಯುಚ್ಛಕ್ತಿ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸದೆ ಸರ್ಕಾರದ ಅಧೀನದಲ್ಲಿಯೇ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಪತ್ರದಲ್ಲಿ, ರಾಜ್ಯದ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳು ಸಾರ್ವಜನಿಕರು, ರೈತರು ಹಾಗೂ ಕೈಗಾರಿಕೋದ್ಯಮಿಗಳಿಗೆ ಸಮರ್ಪಕ ಸೇವೆ ಒದಗಿಸುತ್ತಿದ್ದು, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲೂ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಲಾಗಿದೆ.
ಇಂತಹ ಸಂದರ್ಭದಲ್ಲಿ ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಅವಕಾಶ ನೀಡಿದರೆ ಸರ್ಕಾರದ ನೇರ ನಿಯಂತ್ರಣ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕರು, ರೈತರು ಹಾಗೂ ಕೈಗಾರಿಕೆಗಳ ಹಿತಾಸಕ್ತಿಗೆ ಧಕ್ಕೆಯಾಗುವ ಆತಂಕವಿದೆ ಎಂದು ಸಂಘದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಟಾಟಾ ಪವರ್ ಸಂಸ್ಥೆಯು ಸಲ್ಲಿಸಿರುವ ವಿದ್ಯುತ್ ವಿತರಣಾ ಪರವಾನಗಿ ಅರ್ಜಿಯನ್ನು ವಿದ್ಯುಚ್ಛಕ್ತಿ ಕಾಯ್ದೆ-2003ರ ಸೆಕ್ಷನ್ 108ರ ಅನ್ವಯ ತಿರಸ್ಕರಿಸಿ, ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಸರ್ಕಾರದ ಅಧೀನದಲ್ಲಿಯೇ ಮುಂದುವರಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಬೇಡಿಕೆಗಳನ್ನು ಸರ್ಕಾರ ಪರಿಗಣಿಸದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಹೋರಾಟದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅದರ ಸಂಪೂರ್ಣ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗುತ್ತದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿವೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪಾ ಆಣದೂರೆ, ಜಿಲ್ಲಾಧ್ಯಕ್ಷ ಶ್ರೀಮಂತ್ ಬಿರಾದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಸ್ವಾಮಿ ಸಿರ್ಸಿ, ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಶೋಭಾವತಿ ಕಾರಬಾರಿ, ರಾಜ್ಯ ಪ್ರತಿನಿಧಿ ಶೇಷರಾವ್ ಕಣಜಿ, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಜಮಖಂಡೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾನಂದಾ ದೇಶಮುಖ, ಜಿಲ್ಲಾ ಉಪಾಧ್ಯಕ್ಷರಾದ ಶಂಕರೆಪ್ಪಾ ಪಾರಾ ಹಾಗೂ ಸಿದ್ದಣ್ಣಾ ಭೂಶೆಟ್ಟಿ, ಭಾಲ್ಕಿ ತಾಲ್ಲೂಕಾಧ್ಯಕ್ಷ ಬಾಬುರಾವ್ ಜೋಳದಾಬಕಾ, ಕಮಲನಗರ ತಾಲೂಕಾಧ್ಯಕ್ಷ ಪ್ರವೀಣ್ ಕುಲಕರ್ಣಿ, ಬಸವಕಲ್ಯಾಣ ತಾಲೂಕಾಧ್ಯಕ್ಷ ಸುಭಾಷ್ ರಗಟೆ, ಬೀದರ್ ತಾಲೂಕಾಧ್ಯಕ್ಷ ನಾಗಯ್ಯ ಸ್ವಾಮಿ, ಔರಾದ್ ತಾಲೂಕಾಧ್ಯಕ್ಷ ಪ್ರಕಾಶ್ ಬಾವಗೆ, ಹುಮನಾಬಾದ್ ತಾಲೂಕಾಧ್ಯಕ್ಷ ಸತೀಶ್ ನನ್ನೂರೆ, ಔರಾದ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಶ್ರೀ ದೇಶಮುಖ, ಭಾಲ್ಕಿ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣಾ ಬಳತೆ ಹಾಗೂ ಭಾಲ್ಕಿ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ವನಿತಾ ಮಾಶೆಟ್ಟೆ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದದರು.






