Bidar | ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬೀದರ್-ಕಲಬುರಗಿ ರಸ್ತೆ ತಡೆದು ಪ್ರತಿಭಟನೆ

ಬೀದರ್ : ಜಿಲ್ಲೆಯ ರೈತರ ವಿವಿಧ ಜ್ವಲಂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು, ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ನೌಬಾದ್‌ನ ಬಸವೇಶ್ವರ್ ವೃತ್ತದಲ್ಲಿ ಬೀದರ್-ಕಲಬುರಗಿ ಹಾಗೂ ಬೀದರ್-ಭಾಲ್ಕಿಯ ಪ್ರಮುಖ ರಸ್ತೆಯನ್ನು ತಡೆದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತರು, ಸರಕಾರದ ವಿರುದ್ಧ ಘೊಷಣೆಗಳು ಕೂಗಿದರು. ರಸ್ತೆ ತಡೆ ನಡೆಸಿದ್ದರಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಕೆಲ ವಾಹನಗಳು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸಿದವವು. ಪ್ರತಿಭಟನೆ ಮುಗಿದ ನಂತರದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ್ ಬಿರಾದಾರ್ ಅವರು ಮಾತನಾಡಿ, ರೈತರು ಪ್ರತಿವರ್ಷ ಅತಿವೃಷ್ಟಿ, ಅನಾವೃಷ್ಟಿ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷವೂ ಮುಂಗಾರು ಮಳೆ ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ, ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಗಣಿಸಿ ಬೀದರ್ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಹಾಗೆಯೇ ಪ್ರತಿ ಎಕರೆ ಭೂಮಿಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಲಾಗಿದೆ.
ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡದೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ 2026-27ನೇ ಸಾಲಿನಲ್ಲಿ ಕಾರ್ಖಾನೆ ಪುನರ್ ಆರಂಭಿಸಬೇಕು. ಕಾರ್ಮಿಕರ ಬಾಕಿ ವೇತನ ಸೇರಿದಂತೆ ಶಾಸನಬದ್ಧವಾಗಿ ಪಾವತಿಸಬೇಕಾದ ಎಲ್ಲ ಹಣವನ್ನು ಕೂಡಲೇ ಪಾವತಿಸಬೇಕು. ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ವೈಜ್ಞಾನಿಕ ರೀತಿಯಲ್ಲಿ ಸೂಕ್ತ ಪರಿಹಾರ ನೀಡಬೇಕು. ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸಿ ರೈತರ ಕೃಷಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ಎಂಜಿಎಸ್‌ಎಸ್‌ಕೆ ಹೊರತುಪಡಿಸಿ ಜಿಲ್ಲೆಯ ಇತರ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಶೀಘ್ರ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯಲ್ಲಿ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಸಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಶಾಶ್ವತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.
ರೈತರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಜನರು, ಜಾನುವಾರುಗಳು ಹಾಗೂ ಎತ್ತಿನ ಬಂಡಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಈ ವೇಳೆ ರೈತ ಮುಖಂಡರು ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದಗ ಸ್ವಾಮಿ ಸಿರ್ಸಿ, ರಾಜ್ಯ ಕಾರ್ಯದರ್ಶಿ ಮಹಿಳಾ ಘಟಕದ ಶೋಭಾವತಿ ಕಾರಭಾರಿ, ರಾಜ್ಯ ಪ್ರತಿನಿಧಿ ಶೇಷರಾವ್ ಕಣಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್, ಕಾರಂಜಾ ಮುಳುಗಡೆ ಹಿತರಕ್ಷಣಾ ಸಮಿತಿ ನಿರ್ದೇಶಕ ರಾಜಕುಮಾರ್ ಕೋಸಂ, ಕಾರಂಜಾ ಮುಳುಗಡೆ ಸಂತ್ರಸ್ತರ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಜಮಖಂಡೆ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಂಕರೆಪ್ಪ ಪಾರಾ, ಬಿಎಸ್‌ಎಸ್‌ಕೆ ಕಾರ್ಖಾನೆಯ ಎಸ್ಸಿ, ಎಸ್ಟಿ ಯೂನಿಯನ್ ಅಧ್ಯಕ್ಷ ಮಲ್ಲಿಕಾರ್ಜುನ್ ಭಂಡಾರಿ, ಬಿಎಸ್‌ಎಸ್‌ಕೆ ಕಾರ್ಮಿಕ ಸಂಘದ ಅಧ್ಯಕ್ಷ ಅರ್ಜುನ್ ತಮಗಿಕರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾನಂದಾ ದೇಶಮುಖ, ಮಹಿಳಾ ಘಟಕದ ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷೆ ವಿದ್ಯಾವತಿ ಶೇರಿಕಾರ್, ಔರಾದ್ ತಾಲ್ಲೂಕಾಧ್ಯಕ್ಷೆ ಭಾಗ್ಯಶ್ರೀ ದೇಶಮುಖ, ಭಾಲ್ಕಿ ತಾಲೂಕಾಧ್ಯಕ್ಷೆ ಸುವರ್ಣಾ ಬಳತೆ, ವನೀತಾ ಮಾಶೆಟ್ಟಿ, ನೀಲಾಂಬಿಕಾದೇವಿ ಘಳಗೆ, ಪಾರ್ವತಿ ಬುಯ್ಯಾ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.






