Bidar | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಬೀದರ್: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ನಗರದ ಅಂಬೇಡ್ಕರ್ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ಕಾರಿ ಅತಿಥಿಗೃಹದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿಯು ಪ್ರಮುಖ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶಗೊಂಡಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ, ಕಬ್ಬಿಗೆ ಸೂಕ್ತ ಬೆಲೆ ನಿಗದಿ, ರೈತರ ಸಾಲಮನ್ನಾ, ಬೆಳೆ ವಿಮೆ ಹಣ ಬಿಡುಗಡೆ ಹಾಗೂ ಕಾಡುಪ್ರಾಣಿಗಳಿಂದ ಬೆಳೆಗಳ ರಕ್ಷಣೆಯೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ. ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷಿಕರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ ಎರಡು ತಿಂಗಳಿಂದ ಮಹಾರಾಷ್ಟ್ರ ಮತ್ತು ಕರ್ನಾಟಕದ ರೈತರು ಜಂಟಿಯಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಕಾಲಹರಣ ಮಾಡುತ್ತಿವೆ ಎಂದು ಆರೋಪಿಸಲಾಗಿದೆ.
ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು. ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಬೆಳೆ ವಿಮೆ ಪಾವತಿಸಿರುವ ರೈತರಿಗೆ ಶೇ.100ರಷ್ಟು ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಅನುದಾನದಡಿ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು. ಹೊಲಗಳಲ್ಲಿ ಕಬ್ಬು ಬೆಳೆ ಸುಟ್ಟುಹೋಗಿರುವ ರೈತರಿಗೆ ಪರಿಹಾರ ಒದಗಿಸಬೇಕು. ಹಗಲಿನ ವೇಳೆಯಲ್ಲಿ ನಿರಂತರ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರೈತರ ಹಿತರಕ್ಷಣೆಗೆ ಸರ್ಕಾರ ತಕ್ಷಣ ಮುಂದಾಗದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘಟನೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.
ಜೈಲ್ ಭರೋ ಆಂದೋಲನಕ್ಕೆ ಬೆಂಬಲ :
ಗುಲ್ಬರ್ಗಾದಿಂದ ಹಿಂಡಲಗಾ ಜೈಲಿನವರೆಗೆ ಆಯೋಜಿಸಲಾಗಿರುವ ‘ಜೈಲ್ ಭರೋ’ ಚಳವಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಸ್ವಾಮಿ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಮಲ್ಲಾರೆಡ್ಡಿ ಮುರಾಳ್, ಎಸ್‌ಕೆಎಂ ಅಧ್ಯಕ್ಷ ಬಾಬುರಾವ್ ಹೊನ್ನಾ, ನಸೀರ್ ಅಹ್ಮದ್, ಶಿವರಾಜ್ ಪಾಟೀಲ್ ಅತಿವಾಳ, ಶಂಕರ್ ಪಾಟೀಲ್, ಬಸವರಾಜ್ ಅಷ್ಟೂರ್, ವನೋದ್ ಚಿಂತಾಮಣಿ, ವಿಜಯಕುಮಾರ್ ಬಾವಗಿ, ಶಿವಾನಂದ್ ಸ್ವಾಮಿ, ಪ್ರಭಾವತಿ, ಶಿವನಂದಾ ಗೋರಚಿಂಚೋಳಿ, ಕಮಲಾಬಾಯಿ, ಶಕುಂತಲಾ ಹಾಗೂ ಸೋಮನಾಥ್ ಸೇರಿದಂತೆ ಅನೇಕ ರೈತ ಮುಖಂಡರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.






