Bidar | ರೈತರ ಬೆಳೆ ನಷ್ಟಕ್ಕೆ ಪರಿಹಾರ ನೀಡದೆ ಸರ್ಕಾರದ ನಿರ್ಲಕ್ಷ್ಯ: ಭಗವಂತ್ ಖೂಬಾ ಆರೋಪ

ಬೀದರ್: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರಾಕೃತಿಕ ವಿಕೋಪದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 283 ಕೋಟಿ ರೂ. ಮೌಲ್ಯದ ಬೆಳೆ ನಷ್ಟವಾಗಿರುವ ಕುರಿತು ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಇದುವರೆಗೆ ಜಿಲ್ಲೆಗೆ ನಯಾಪೈಸೆ ಪರಿಹಾರ ಬಂದಿಲ್ಲ. ರೈತರ ಬದುಕು ಡೋಲಾಯಮಾನವಾಗಿದ್ದರೂ ಸರ್ಕಾರ ಸಂವೇದನಾಶೀಲತೆಯಿಂದ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ದೂರಿದರು.
ಬೆಳೆ ನಷ್ಟ ಅನುಭವಿಸಿದ ರೈತರಿಗೆ ತಲಾ 2,500 ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ದಸರಾ ಹಾಗೂ ದೀಪಾವಳಿ ಹಬ್ಬದೊಳಗೆ ಹಣ ಜಮೆ ಮಾಡುವ ಭರವಸೆಯನ್ನೂ ನೀಡಲಾಗಿತ್ತು. ಆದರೆ, ಹಬ್ಬಗಳು ಮುಗಿದರೂ ರೈತರ ಖಾತೆಗೆ ಹಣ ಬಂದಿಲ್ಲ. ಸರ್ಕಾರದ ಪರಿಹಾರದ ಘೋಷಣೆ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಟೀಕಿಸಿದರು.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ 3,73,623 ರೈತರು 5,75,838 ಎಕರೆ ಜಮೀನಿಗೆ ಸುಮಾರು 23 ಕೋಟಿ ರೂ. ವಿಮಾ ಕಂತು ಪಾವತಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಪಾಲಿನ 51 ಕೋಟಿ ರೂ.ಗಳನ್ನು ವಿಮಾ ಕಂಪನಿಗಳಿಗೆ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಸರ್ಕಾರ ತನ್ನ ಪಾಲಿನ 51 ಕೋಟಿ ರೂ. ಬಿಡುಗಡೆ ಮಾಡದ ಕಾರಣ ರೈತರಿಗೆ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯಪ್ರವೇಶಿಸಿ ಒಂದು ವಾರದೊಳಗೆ ರಾಜ್ಯ ಸರ್ಕಾರದ ಪಾಲಿನ ಹಣ ಬಿಡುಗಡೆ ಮಾಡಿಸಬೇಕು ಎಂದು ಒತ್ತಾಯಿಸಿದರು.
ಬೀದರ್ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ 448.31 ಕೋಟಿ ರೂ. ವೆಚ್ಚದಲ್ಲಿ 5 ಎಕರೆ 11 ಗುಂಟೆ ಜಾಗದಲ್ಲಿ ಕಾಮಗಾರಿ ಕೈಗೊಳ್ಳಲು 2025ರ ನವೆಂಬರ್ 20ರಂದು ಟೆಂಡರ್ ಪ್ರಕ್ರಿಯೆ ನಡೆದಿದೆ. 18 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಷರತ್ತಿದ್ದರೂ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಕಟ್ಟಡದ ಪಾಯದ ಕೆಲಸವೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಮಾತನಾಡಿ, ಜಿಲ್ಲೆಯ ಬಡ ರೋಗಿಗಳಿಗೆ ಆಸರೆಯಾಗಬೇಕಾದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಲಿಫ್ಟ್‌ಗಳು ಹಾಗೂ ಸಿಟಿ ಸ್ಕ್ಯಾನ್ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪ್ರಯೋಗಾಲಯಗಳಲ್ಲಿ ಸಿಬ್ಬಂದಿ ಕೊರತೆಯಿದ್ದು, ಸ್ವಚ್ಛತೆಯನ್ನೂ ಕಡೆಗಣಿಸಲಾಗಿದೆ ಎಂದು ದೂರಿದರು.
ಜಿಲ್ಲಾಡಳಿತವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಉಸ್ತುವಾರಿ ಸಚಿವರು ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ವಿಳಂಬ, ಆಸ್ಪತ್ರೆಯ ಅವ್ಯವಸ್ಥೆ ಹಾಗೂ ರೈತರ ಸಮಸ್ಯೆಗಳ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಮಹಾನಗರ ಪಾಲಿಕೆ ಸದಸ್ಯ ಶಶಿ ಹೊಸಳ್ಳಿ, ಮುಖಂಡರಾದ ಅಶೋಕ್ ಕರಂಜಿ ಹಾಗೂ ಶ್ರೀನಿವಾಸ್ ಚೌದ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.






