Bidar | ಆರೋಗ್ಯವೇ ಜೀವನದ ನಿಜವಾದ ಸಂಪತ್ತು : ಸೂರ್ಯಕಾಂತ್ ನಾಗಮಾರಪಳ್ಳಿ

ಬೀದರ್ : ಆರೋಗ್ಯವೇ ಜೀವನದ ನಿಜವಾದ ಸಂಪತ್ತಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸಬೇಕು ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ್ ನಾಗಮಾರಪಳ್ಳಿ ಹೇಳಿದರು.
ನಗರದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಡಾ. ಗುರುಪಾದಪ್ಪಾ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆ ಹಾಗೂ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಿದ್ದ ಸಹಕಾರ ಸಪ್ತಾಹದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೆ ಸಮಯಕ್ಕೆ ಸರಿಯಾಗಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾಮಂಡಳದ ಅಧ್ಯಕ್ಷೆ ಶಕುಂತಲಾ ಕೆ. ಬೆಲ್ದಾಳೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯ ಬದಲಾವಣೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಉತ್ತಮ ಜೀವನಶೈಲಿ ಹಾಗೂ ದುಶ್ಚಟಗಳಿಂದ ದೂರವಿರುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್‌ನ ಸಿಡಿಒಗಳು, ಸಹಕಾರ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಹಕಾರ ಕ್ಷೇತ್ರದ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಡಾ. ನೀಲಾಂಬಿಕಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹಕಾರ ಯೂನಿಯನ್‌ನ ಜಿಲ್ಲಾ ಉಪಾಧ್ಯಕ್ಷ ವೈಜಿನಾಥ್ ಆನಂದೆ, ವೈದ್ಯೆ ಡಾ. ಕಾರ್ತಿಕ್ ಪಾಟೀಲ್ ಹಾಗೂ ಡಾ. ನಿಕಿತಾ ಸೇರಿದಂತೆ ಇತರರು ಇದ್ದರು. ಮಾರುತಿ ಕೆ. ಸ್ವಾಗತಿಸಿದರು. ಬೀದರ್ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಆರ್. ಮಲ್ಲಮ್ಮ ನಿರೂಪಿಸಿ, ವಂದಿಸಿದರು.






