ಬೀದರ್ | ಮಾಂಜ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಸಾಗಾಟ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಹುಲಸೂರ್ : ತಾಲೂಕಿನ ಮೂಲಕ ಹರಿಯುವ ಮಾಂಜ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಸಾಗಣೆ ಮತ್ತೆ ನಿರಂತರವಾಗಿ ನಡೆಯುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಹಿಂದೆ ಭಾಲ್ಕಿ ಉಪವಿಭಾಗದ ಡಿವೈಎಸ್ಪಿಯಾಗಿದ್ದ ಬಲ್ಲಪ್ಪ ನಂದಗಾವಿ ಅವರ ನೇತೃತ್ವದಲ್ಲಿ ಅಕ್ರಮ ಮರಳು ಸಾಗಣೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗಿತ್ತು. ಇದರಿಂದ ಮಾಂಜ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಸಾಗಣೆ ಬಹುತೇಕ ನಿಯಂತ್ರಣಕ್ಕೆ ಬಂದಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಪ್ರಸ್ತುತ ಹುಲಸೂರ್ ಪೊಲೀಸ್ ಠಾಣೆ ವ್ಯಾಪ್ತಿಯು ಹುಮನಾಬಾದ್ ಉಪವಿಭಾಗದ ಅಧೀನದಲ್ಲಿದ್ದು, ಡಿವೈಎಸ್ಪಿ ಮಾಡೋಳಪ್ಪ ಅವರು ಉಪವಿಭಾಗದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆದರೆ, ಕೊಂಗಳಿ ಸಮೀಪದ ಏತ ನೀರಾವರಿ ಯೋಜನೆಯಡಿ ನಿರ್ಮಿಸಿರುವ ಡ್ಯಾಂ ಪಕ್ಕ ಸೇರಿದಂತೆ ನದಿ ಪಾತ್ರದ ವಿವಿಧೆಡೆ ಮಧ್ಯರಾತ್ರಿಯಿಂದ ನಸುಕಿನ ಜಾವದವರೆಗೆ ಅಕ್ರಮವಾಗಿ ಮರಳು ತೆಗೆಯುವ ಹಾಗೂ ಟ್ರ್ಯಾಕ್ಟರ್‌ಗಳ ಮೂಲಕ ಸಾಗಿಸುವ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ.
ಅಕ್ರಮ ಮರಳು ಸಾಗಣೆ ತಡೆಯಲು ಪೊಲೀಸ್ ಇಲಾಖೆ ಮತ್ತು ಗಣಿ ಹಾಗೂ ಭೂವಿಜ್ಞಾನ ಇಲಾಖೆ ಜಂಟಿಯಾಗಿ ನಿರಂತರ ಕಾರ್ಯಾಚರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.






