ಬೀದರ್ | ಗ್ಯಾರಂಟಿ ಯೋಜನೆಯನ್ನು ಯಾವುದೇ ತೊಂದರೆಯಾಗದಂತೆ ಅನುಷ್ಠಾನಗೊಳಿಸಿ : ಎಸ್.ಆರ್.ಮೆಹರೋಝ್ ಖಾನ್
ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಬೀದರ್ : ಇಡೀ ದೇಶದ ಹಾಗೂ ವಿಶ್ವದ ಗಮನ ಸೆಳೆದಿರುವ ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಡಿ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಮೆಹರೋಝ್ ಖಾನ್ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಪ್ರತಿ ವರ್ಷ 52 ಸಾವಿರ ಕೋಟಿ ರೂ. ಖರ್ಚು ಮಾಡಿ ಸ್ವಾವಲಂಬಿ ಬದುಕು ಕೊಟ್ಟ ಗ್ಯಾರಂಟಿ ಯೋಜನೆಗಳು ಇಡೀ ದೇಶದ ಹಾಗೂ ವಿಶ್ವದ ಗಮನ ಸೆಳೆದಿವೆ. ಬೀದರ್ ಜಿಲ್ಲೆಯಲ್ಲಿ ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಹಾಗೂ ಮಾಧ್ಯಮ ವರ್ಗದ ಜನರ ಆರ್ಥಿಕ ಸಂಕಷ್ಟಗಳಿಗೆ ಸಾಕಷ್ಟು ಪರಿಹಾರ ನೀಡುವ ಮೂಲಕ ಅವರಲ್ಲಿ ಶಕ್ತಿ ತುಂಬಿದೆ ಎಂದರು.
ಕೋಟ್ಯಾಂತರ ಫಲಾನುಭವಿಗಳು ಸಣ್ಣಪುಟ್ಟ ಉದ್ಯೋಗ ಸ್ಥಾಪಿಸಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಪ್ರಚಾರಕ್ಕಾಗಿ ಕಾಲೇಜುಗಳಲ್ಲಿ ಹಾಗೂ ಯುವಕರಲ್ಲಿ ವಿಶೇಷ ಪ್ರಚಾರ ಆಂದೋಲನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಕಾಲೇಜುಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಸಂಚರಿಸುವಂತೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ನಿಲುಗಡೆಗಳಲ್ಲಿ ನಿಲ್ಲಿಸುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯು ಕಳ್ಳ ಸಾಗಾಣಿಕೆಯಲ್ಲಿ ಕಂಡು ಬಂದು ಅನೇಕ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳಿಗೆ ಎಚ್ಚರಿಕೆ ನೀಡಬೇಕು. ಕಳ್ಳ ಸಾಗಾಟದಲ್ಲಿ ಕಂಡುಬಂದ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ್ ದುಬೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಎಮ್.ಎಚ್., ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಮೇಶ್ ಪಾಟೀಲ್, ಕೆ.ಕೆ.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ್ ಫುಲೇಕರ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ.ಪ್ರಭಾಕರ್ ಸೇರಿದಂತೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ, ಸದಸ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







