ಬೀದರ್ | ನ.7ರಂದು ಕನ್ನಡ ದೀಕ್ಷೆ ಪ್ರತಿಜ್ಞಾ ಸ್ವೀಕಾರ ಸಮಾರಂಭ : ಸೋಮನಾಥ್ ಮುಧೋಳ್

ಬೀದರ್ : ನ.7 ರಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ದೀಕ್ಷೆ ಪ್ರತಿಜ್ಞಾ ಸ್ವೀಕಾರ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ್ ಮುಧೋಳ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸೋಮನಾಥ್ ಮುಧೋಳ್, ಬೀದರ್ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅರಿವು ಮೂಡಿಸುವ ಹಾಗೂ ಕನ್ನಡ ಭಾಷಾಭಿಮಾನ ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನ. 7ರಂದು ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಉದ್ಘಾಟಿಸುವರು. ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರು ಅಧ್ಯಕ್ಷತೆ ವಹಿಸುವರು. ನಾಡೋಜ ಡಾ. ಬಸವಲಿಂಗ ಪಟ್ಟದೇವರು ಹಾಗೂ ಗುರುಬಸವ ಪಟ್ಟದೇವರು ದಿವ್ಯ ಸಾನಿಧ್ಯ ವಹಿಸುವರು. ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಮತ್ತು ಇತರೆ ಅತಿಥಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗುವರು ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಪ್ರೇಮಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸೋಮಶೇಖರ್ ಸಜ್ಜನ್ ಹಾಗೂ ಶಿವರುದ್ರ ತೀರ್ಥ, ಔರಾದ್ ತಾಲೂಕಾಧ್ಯಕ್ಷ ಅನಿಲ್ ಹೇಡೆ, ಹುಮನಾಬಾದ್ ತಾಲೂಕಾಧ್ಯಕ್ಷ ವಿರೇಶ್ ರೆಡ್ಡಿ, ಕಮಲನಗರ ತಾಲೂಕಾಧ್ಯಕ್ಷ ಮಂಜುನಾಥ್ ಸ್ವಾಮಿ, ಭಾಲ್ಕಿ ತಾಲೂಕಾಧ್ಯಕ್ಷ ಬಂಡೆಪ್ಪ ಕರಸಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಗೌಡ ಇದ್ದರು.







