ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರಂತೆ ಪಾಠ ಮಾಡಿದ ಅವರು, ಪ್ಲಾಸ್ಟಿಕ್ ನಿಂದ ಆಗುವ ಪರಿಣಾಮಗಳ ಬಗ್ಗೆ ತಿಳಿಸಿ ಹೇಳಿದರು.
ಕಾಲೇಜಿನ ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.
ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅವರ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತು ಹೇಳಿ ಹುರಿದುಂಬಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೇರಿ ಇತರರು ಇದ್ದರು.