Bidar | ಶಿಥಿಲಗೊಂಡ ಬಗದಲ್ ಸೇತುವೆ ವೀಕ್ಷಿಸಿದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
21 ಕೋಟಿ ರೂ. ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಒತ್ತಾಯ

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಗದಲ್ ಗ್ರಾಮದ ಸಮೀಪ ಕಾರಂಜಾ ನದಿಯ ಹಿನ್ನೀರಿನ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹಳೆಯ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನೂತನ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಅವರು, ಸುಮಾರು 21 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಬೀದರ್–ಚಿಂಚೋಳಿ ಪ್ರಮುಖ ಸಂಪರ್ಕ ರಸ್ತೆಯಲ್ಲಿರುವ ಬಗದಲ್ ಸೇತುವೆಯು ಸುತ್ತಮುತ್ತಲಿನ ಗ್ರಾಮಗಳ ಜನರ ದೈನಂದಿನ ಸಂಚಾರಕ್ಕೆ ಅತ್ಯಂತ ಪ್ರಮುಖವಾಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ಸಾರ್ವಜನಿಕರು, ರೈತರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ವಾಹನಗಳು ಸಂಚರಿಸುತ್ತವೆ. ವಿಶೇಷವಾಗಿ ಕಬ್ಬು ಬೆಳೆಗಾರರು ತಮ್ಮ ಕಬ್ಬನ್ನು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಹೀಗಾಗಿ ಸೇತುವೆಯ ದುಸ್ಥಿತಿ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಬಗದಲ್ ಸೇತುವೆಯು ಕೇವಲ ಒಂದು ಗ್ರಾಮದ ಸಂಪರ್ಕಕ್ಕೆ ಸೀಮಿತವಾಗದೆ, ಸುತ್ತಮುತ್ತಲಿನ ಹಲವು ಗ್ರಾಮಗಳ ಜನರ ಸಂಚಾರ, ಕೃಷಿ ಚಟುವಟಿಕೆ ಹಾಗೂ ವ್ಯಾಪಾರ ವಹಿವಾಟಿಗೆ ಪ್ರಮುಖ ಆಧಾರವಾಗಿದೆ. ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ಭಾರೀ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ಬಗ್ಗೆಯೂ ಆತಂಕ ಎದುರಾಗಿದೆ.
ಸೇತುವೆಯ ಪ್ರಸ್ತುತ ಸ್ಥಿತಿಯನ್ನು ಪರಿಗಣಿಸಿ, ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಭಾರೀ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಮನ್ನಾಏಖೇಳ್ಳಿ ಕ್ರಾಸ್‌ನಿಂದ ಬಂಗೂರ್ ಕ್ರಾಸ್ ಮಾರ್ಗವಾಗಿ ಮನಳ್ಳಿ ಗ್ರಾಮದ ಮೂಲಕ ಭಾರೀ ವಾಹನಗಳು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಬೀದರ್ ನಗರದಿಂದ ಬರುವ ವಾಹನಗಳು ಮೂರಾರ್ಜಿ ದೇಸಾಯಿ ಶಾಲೆಯ ಬಳಿಯ ಮನ್ನಳ್ಳಿ ರಸ್ತೆಯ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ ಎಂದು ಶಾಸಕ ಬೆಲ್ದಾಳೆ ತಿಳಿಸಿದರು.
ಸಾರ್ವಜನಿಕರು ಹಾಗೂ ವಾಹನ ಸವಾರರು ಜಿಲ್ಲಾಡಳಿತ ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ಸೇತುವೆಯ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದೆ ಎಂದರು.
ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ರೈತರ ಹಿತಾಸಕ್ತಿ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮೂಲಸೌಕರ್ಯ ಕಲ್ಪಿಸುವುದು ತಮ್ಮ ಆದ್ಯತೆಯಾಗಿದೆ. ಬಗದಲ್ ಸೇತುವೆ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರಾಗುವವರೆಗೆ ಸರ್ಕಾರದ ಗಮನ ಸೆಳೆದು ಪ್ರಯತ್ನ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೀದರ್ ದಕ್ಷಿಣ ಮಂಡಲದ ಅಧ್ಯಕ್ಷ ಗುರುನಾಥ್ ಎಂ. ರಾಜಗಿರಿ (ಬಗದಲ್), ಮುಖಂಡರಾದ ರೇವಣಪ್ಪ ಮೈಲಾರ್, ಸೋಮನಾಥ್ ಪೊಶೆಟ್ಟಿ, ಶಶಿಕಾಂತ್ ಕಲವೆಟಿ, ಶಿವಕುಮಾರ್ ಗೌಡಪ್ಪನೂರ್, ಅಣ್ಣಪ್ಪ ರಾಜಗಿರಿ, ಪ್ರಭುರಾವ್ ಹಲಬುರ್ಗಿ, ಹನ್ನಾನ್ ಗಾಜಿ, ಕಂಟೆಪ್ಪ ಮೈಲಾರ್, ಅಶೋಕ್ ಜಮಾದಾರ್, ಇಕ್ಬಾಲ್ ಗಾಜಿ, ಸುಭಾಷ್ ಮಟ್ಟಿಗೆ ಹಾಗೂ ಯಾದುಲ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.






